ಬೆಂಗಳೂರು: ಎರಡು ಪ್ರಕರಣಗಳಲ್ಲಿ ಬಂಧನವಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮತ್ತೊಂದು ಹಳೇ ಪ್ರಕರಣದಲ್ಲಿ ಬಂಧಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರಿಗೆ, ನಗರದ 1ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಕೊರೊನಾ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಎನ್‌ಡಿಎಂಎ ಕಾಯ್ದೆಯಡಿ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.
ಡಿಸೆಂಬರ್ 27ರಂದು ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ನಡೆಸಿದ ಪ್ರತಿಭಟನೆ ವೇಳೆ ಬಂಧನವಾಗಿದ್ದ ಅವರಿಗೆ ಜ.6ರಂದು ದೇವನಹಳ್ಳಿ 5ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಮಂಗಳವಾರ(ಜ.9)ರಂದು ಬಿಡುಗಡೆಯಾದ ಬೆನ್ನಲ್ಲೇ ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದರು.
2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನಾರಾಯಣ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು, ಬುಧವಾರ 30ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿ, ನಾರಾಯಣಗೌಡರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇದನ್ನೂ ಓದಿ | BJP Karnataka: ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಕಾರ್ಯತಂತ್ರ; ಕ್ಷೇತ್ರವಾರು ಸಭೆಯಲ್ಲಿ ಬಿಜೆಪಿ ನಿರ್ಧಾರ
ಸಾರ್ವಜನಿಕ ಆಸ್ತಿ ಹಾನಿ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೊಂದು ಕೇಸ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದ್ದರು. 2020ರಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ವೇಳೆ ಕೊರೊನಾ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಎನ್‌ಡಿಎಂಎ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ಬಳಿಕ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ಸಂಜೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದಲ್ಲೂ ಅವರಿಗೆ ಜಾಮೀನು ಮಂಜೂರು ಆಗಿದೆ. 10 ಸಾವಿರ ರೂ. ಕ್ಯಾಷ್ ಶ್ಯೂರಿಟಿ ನೀಡುವಂತೆ ಸೂಚಿಸಿ, ನ್ಯಾಯಾಧೀಶರಾದ ಆನಂದ್ ಎಸ್. ಕರಿಯಮ್ಮನವರು ಜಾಮೀನು ಮಂಜೂರು ಮಾಡಿದ್ದಾರೆ.