ಬೆಂಗಳೂರು: ಕರ್ನಾಟಕದ ಜೀವನದಿಯಾದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದು ಎಂದು ರಾಜ್ಯಾದ್ಯಂತ ಕನ್ನಡ ಸಂಘಟನೆಗಳು ನೀಡಿರುವ ಬಂದ್ ಕರೆಗೆ (Karnataka Bandh) ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಬಹುತೇಕ ಭಾಗ ಸ್ತಬ್ಧವಾಗಿದ್ದು, ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಘೋಷಣೆ ಕೂಗುತ್ತಿದ್ದಾರೆ. ಮತ್ತೊಂದೆಡೆ ಚಿತ್ರದುರ್ಗದಲ್ಲಿ (Chitradurga) ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಭಾವಚಿತ್ರ ಇಟ್ಟು, ತಿಥಿ ಕಾರ್ಯ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ.
ಚಿತ್ರದುರ್ಗ ನಗರದ ಮಹಾತ್ಮ ಗಾಂಧಿ ಸರ್ಕಲ್‌ನಲ್ಲಿ ರೈತರು ಎಂ.ಕೆ.ಸ್ಟಾಲಿನ್ ಅವರ ಫೋಟೊ ಇಟ್ಟು, ತಿಥಿ ಕಾರ್ಯ ಮಾಡಿದ ರೈತರು, “ನಮಗೇ ನೀರು ಇಲ್ಲ. ಅವರಿಗೆ ಯಾಕೆ ನೀರು ಬಿಡುತ್ತೀರಿ” ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ, ಸ್ಟಾಲಿನ್ ಫೋಟೊ ಎದುರು ಮದ್ಯದ ಬಾಟಲಿ ಇಟ್ಟು, ಪ್ರತಿಕೃತಿ ದಹಿಸಿ ಘೋಷಣೆ ಕೂಗಿದರು.
ಕೋಲಾರದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕನ್ನಡ ಸಂಘಟನೆಗಳ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಗರದಲ್ಲಿ ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ.
ಕಾವೇರಿ ನದಿಗೆ ಇಳಿದು ಪ್ರತಿಭಟನೆ
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡಬಾರದು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಇಳಿದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶ್ರೀರಂಗಪಟ್ಟಣ ಬಳಿ ಇರುವ ಕಾವೇರಿ ನದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಸಂಸದರ ಭಾವಚಿತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು.
ಹಾಗೆಯೇ, ಮೈಸೂರು, ಮಂಡ್ಯ, ಹುಬ್ಬಳ್ಳಿ, ಕಲಬುರಗಿ, ದಾವಣಗೆರೆ, ಮಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಸ್ತೆಗಿಳಿದ ಕನ್ನಡ ಸಂಘಟನೆಗಳು ಟೈರ್‌ಗೆ ಬೆಂಕಿ ಹಚ್ಚಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.