Site icon Vistara News

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

CM Siddaramaiah

Karnataka BJP Will Not Succeed In Weaken The State Government: Says CM Siddaramaiah

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮ, ಮುಡಾ ಹಗರಣಗಳನ್ನು (MUDA Scam) ಇಟ್ಟುಕೊಂಡು ರಾಜ್ಯ ಸರ್ಕಾರವನ್ನು (Karnataka Government) ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ದೆಹಲಿಗೆ ತೆರಳಿ, ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿದ್ದಾರೆ. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನವು ಫಲ ನೀಡುವುದಿಲ್ಲ” ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಹಲವು ನಾಯಕರನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದರು. ಇದಾದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ” ಎಂದು ತಿಳಿಸಿದರು.

“ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಇದುವರೆಗೆ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ. ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ಇನ್ನು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ಇದನ್ನೂ ಓದಿ: Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Exit mobile version