Site icon Vistara News

Karnataka Budget 2023 : ಗ್ಯಾರಂಟಿಗಳು ಯಾಕೆ? ದುಡ್ಡು ಎಲ್ಲಿಂದ ಬರುತ್ತೆ? ಸಿದ್ದರಾಮಯ್ಯ ಪಿನ್‌ ಟು ಪಿನ್‌ ವಿವರಣೆ

siddaramaiah budget

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎನ್ನಬೇಡಿ. ಇದು ಬಡವರಿಗೆ ಮಾಡುವ ಅಪಮಾನ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್‌ (Karnataka Budget 2023) ಮಂಡನೆ ಮಾಡುತ್ತಾ ಮಾತನಾಡಿದ ಅವರು, ಜನರು ಬುದ್ಧಿವಂತರಾಗಿದ್ದು, ಇಂಥ ತರ್ಕರಹಿತ ಆಲೋಚನೆಗಳನ್ನು ನಂಬುವುದಿಲ್ಲ ಎಂದಿದ್ದಾರೆ.

ನಮ್ಮ ಐದು ಗ್ಯಾರಂಟಿಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದು, ಇಲ್ಲಸಲ್ಲದ ಸುಳ್ಳುಗಳನ್ನು ಹರಡುವುದು, ಜನರಲ್ಲಿ ಗೊಂದಲ ಮೂಡಿಸುವುದು, ಇಂಥ ಕೆಲಸ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಒಂದೇ ಒಂದು ಮಾತು ಹೇಳಲು ಬಯಸುತ್ತೇನೆ. ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಇಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕಾಗಿದೆ. ತಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಿ ಆದರೆ, ಶ್ರೀಸಾಮಾನ್ಯರ ವಿವೇಚನೆಗೆ ಅಪಮಾನ ಮಾಡಬೇಡಿ ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದರು. ಜತೆಗೆ ಜನರು ಪ್ರಜ್ಞಾವಂತರು, ಇಂಥ ತರ್ಕರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ ಜನ ನಿಮ್ಮಿಂದ ಬೇಸತ್ತು ಇಷ್ಟೊಂದು ಭಾರಿ ಬಹುಮತದಿಂದ ನಮ್ಮನ್ನು ಆರಿಸಿ ವಿಧಾನಸೌಧಕ್ಕೆ ಕಳುಹಿಸಿದ್ದಾರೆ ಎಂದರು ಸಿದ್ದರಾಮಯ್ಯ.

ನಾವು ಈಗಾಗಲೇ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಮೂಲಕ ಅವರ ಕನಸುಗಳಿಗೆ ರೆಕ್ಕೆ ಮೂಡಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಈಗಾಗಲೇ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು. ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿನಿಂದ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ ತಿಂಗಳಿನಲ್ಲಿ ಜಾರಿಗೆ ತರುತ್ತೇವೆ. ಯುವನಿಧಿ ಯೋಜನೆಯು 2023ರಲ್ಲಿ ಪದವಿ ಪಡೆದ ಯುವಜನರಿಗಾಗಿ ಜಾರಿಗೆ ಬರಲಿದೆ. ಅನ್ನಭಾಗ್ಯದಡಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದಿಂದ ಒದಗಿಸುವ ಹೆಚ್ಚುವರಿ ಐದು ಕೆ.ಜಿ. ಸೇರಿದಂತೆ ಒಟ್ಟಾರೆ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ವಿತರಿಸಲು ನಾವು ಬದ್ಧರಾಗಿದ್ದೇವೆ.

ನಾವೇಕೆ ಗ್ಯಾರಂಟಿ ಯೋಜನೆ ಘೋಷಿಸಿದೆವು ಅಂದರೆ…

ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ? ಹಾಗೂ ಯಾಕೆ ಜಾರಿಗೊಳಿಸುತ್ತಿದ್ದೇವೆ? ಅವು ಬಿಟ್ಟಿ ಕೊಡುಗೆಗಳಲ್ಲ. ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಚಿಂತನೆಯನ್ನು ಸ್ಮರಿಸುತ್ತೇನೆ. ʻಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಅದು ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು. ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲʼ.
ಮುಕ್ತ ಮಾರುಕಟ್ಟೆಯ ಈ ಯುಗದಲ್ಲಿ ಬಂಡವಾಳ ಹೂಡಿಕೆಯನ್ನು ವ್ಯಾಪಕವಾಗಿ ಆಕರ್ಷಿಸುವುದು, ಉದ್ಯೋಗಸಹಿತ ಬೆಳವಣಿಗೆಯನ್ನು ಸಾಕಾರಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದ್ದು ಸಂಪತ್ತಿನ ವ್ಯಾಪಕ ಅಸಮಾನ ಹಂಚಿಕೆಯು ಸೃಷ್ಟಿಸುವ ಬೃಹತ್ ಕಂದರವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳುವುದಾಗಿದೆ. ಅಭಿವೃದ್ಧಿಯ ಫಲವನ್ನು ಬಡವರು, ಶೋಷಿತರು ಹಾಗೂ ದುರ್ಬಲ ವರ್ಗದವರಿಗೆ ಹಂಚುವ ನಮ್ಮ ಪ್ರಯತ್ನವಾಗಿದೆ. ಅಭಿವೃದ್ಧಿಯ ಸಾಹಿತ್ಯದಲ್ಲಿ ಆರ್ಥಿಕ ಪ್ರಗತಿಯ ಫಲಗಳು ಬಡವರಿಗೆ ಸಹಜವಾಗಿ ಹರಿದುಬರುತ್ತದೆ (trickle down theory) ಎಂಬ ನಂಬಿಕೆ ಹುಸಿಯಾದ ಸಂದರ್ಭದಲ್ಲಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಬೇಷರತ್ತಾಗಿ ನಗದು ವರ್ಗಾವಣೆ ಮಾಡುವುದು ಮಹಿಳಾ ಸಬಲೀಕರಣ ಹಾಗೂ ಅವರ ಖರೀದಿಸುವ ಸಾಮರ್ಥ್ಯ ಹೆಚ್ಚಿಸುವ ಪರಿಣಾಮಕಾರಿ ಮಾರ್ಗವೆಂಬುದು ಸಾಬೀತಾಗಿದೆ.

ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಯಿಂದ ಬೆಲೆ ಏರಿಕೆಗೆ ಸಾಂತ್ವನ

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳು ಕೇಂದ್ರ ಸರ್ಕಾರದ ವೈಫಲ್ಯದಿಂದ ಅನಿಯಂತ್ರಿತ ಬೆಲೆ ಏರಿಕೆಯಿಂದ ತತ್ತರಿಸುವ ಕುಟುಂಬಗಳಿಗೆ ತುಸು ನಿರಾಳತೆ ತಂದುಕೊಡುತ್ತವೆ. ಮಹಿಳೆಯರ ಓಡಾಟಕ್ಕೆ ಬೆಂಬಲ ನೀಡುವ ಶಕ್ತಿ ಯೋಜನೆಯು ಅವರಿಗೆ ಹಣ ಉಳಿತಾಯ ಮಾಡುವುದರೊಂದಿಗೆ ಮನೆಯಿಂದ ದೂರದ ಸ್ಥಳಗಳಲ್ಲಿಯೂ ಉದ್ಯೋಗ ಕಂಡುಕೊಳ್ಳಲು ನೆರವಾಗುತ್ತದೆ. ಅನ್ನಭಾಗ್ಯವು ಯಾರೂ ಹಸಿದುಕೊಂಡಿರಬಾರದೆಂಬುದನ್ನು ಖಾತರಿ ಪಡಿಸಿದರೆ, ಯುವನಿಧಿ, ಉದ್ಯೋಗಾಕಾಂಕ್ಷಿ ಯುವ ಜನರಿಗೆ ಮಾನಸಿಕ ಸ್ಥೈರ್ಯ ನೀಡುತ್ತದೆ.

130 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 48,000ರಿಂದ 60000 ರೂ ಸಹಾಯ

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚು ಹಣವನ್ನು ಕೊಡುವುದು ನಮ್ಮ ಗುರಿ

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ.

ನಮ್ಮ ಗ್ಯಾರಂಟಿಗಳಿಗೆ ಎಲ್ಲಿಂದ ದುಡ್ಡು ತರುತ್ತೇವೆ ಎಂದರೆ..

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು. ವಿತ್ತೀಯ ಸಂಪನ್ಮೂಲಗಳು ಹಾಗೂ ಆಡಳಿತದ ದಕ್ಷ ನಿರ್ವಹಣೆ ಒಂದು ಕಲೆ ಮತ್ತು ವಿಜ್ಞಾನ; ಕೇವಲ ಸಾಮಾಜಿಕ ಜಾಲತಾಣಗಳ ಸಂದೇಶವಲ್ಲ ಎಂಬುದನ್ನು ಅರಿತರೆ ಒಳ್ಳೆಯದು. ಈ ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

ಇದನ್ನೂ ಓದಿ: Karnataka budget 2023: ರಾಜ್ಯದಲ್ಲಿ ಕತ್ತಲು ಅಂತ್ಯ; ದೇಶ ಇನ್ನೂ ಅಂದಕಾರದಲ್ಲಿದೆ: ಸಿದ್ದರಾಮಯ್ಯ ಬಜೆಟ್‌ನಲ್ಲಿ ರಾಜಕೀಯ ಭಾಷಣ

Exit mobile version