Site icon Vistara News

Karnataka Budget 2023 : ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ 500 ರೂ., ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ

woman

#image_title

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.

ಸ್ವಸಹಾಯ ಗುಂಪುಗಳಿಗೆ ಬಡ್ಡಿರಹಿತ ಸಾಲ

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ. ಈ ಧ್ಯೇಯೋದ್ದೇಶವನ್ನು ಮುಂದುವರಿಸುತ್ತಾ ನಮ್ಮ ಸರ್ಕಾರವು ಗೃಹಿಣಿ ಯೋಜನೆಯನ್ನು ಇದರಡಿಯಲ್ಲಿ ಜಾರಿಗೊಳಿಸಲು ನಿರ್ಧರಿಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ ೫೦೦ ರೂ.

ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನ ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿಬಿಟಿ ಮೂಲಕ ನೀಡಲಿದೆ ಎಂದರು.

ಗೃಹೋದ್ಯಮಕ್ಕೆ ನೆರವು: ಲಕ್ಷ ಮಹಿಳೆಯರಿಗೆ ಉಚಿತ ತರಬೇತಿ

ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based Industry) ಪ್ರಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು, ಬಾಲಕಿಯರು ಮತ್ತು ವಾಹಿಳೆಯರ ಸಬಲೀಕರಣದ ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ.

ಆರೋಗ್ಯ ಪುಷ್ಟಿ ಯೋಜನೆಗೆ ಬಲ

ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ‘ಆರೋಗ್ಯ ಪುಷ್ಟಿ’ ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಥ: ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.

ಸಂಘಟಿತ ವಲಯದ ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ

ರಾಜ್ಯದ ಸಂಘಟಿತ ವಲಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ರಾಜ್ಯದ ಒಟ್ಟು 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ 1,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಇದನ್ನೂ ಓದಿ : Karnataka Budget 2023 : ಬಡ್ಡಿ ರಹಿತ ಸಾಲ 3 ರಿಂದ 5 ಲಕ್ಷಕ್ಕೆ ಹೆಚ್ಚಳ; ಬಜೆಟ್‌ನಲ್ಲಿ ಘೋಷಣೆ

Exit mobile version