ಬೆಂಗಳೂರು: ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ ಮಾವು ಮತ್ತಿತರ ಹಣ್ಣು ತರಕಾರಿ ಹೂವು ಸೇರಿದಂತೆ ತೋಟಗಾರಿಕೆ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲು, ಉತ್ಪನ್ನಗಳ ಸಂಸ್ಕರಣೆಗಾಗಿ 8 ಶೀತಲ ಘಟಕಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. 5 ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣದ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ ಎಂದು ಬಜೆಟ್ನಲ್ಲಿ (Karnataka Budget 2023) ಪ್ರಕಟಿಸಲಾಗಿದೆ.
- ವಿಶಿಷ್ಟ ರುಚಿ ಹಾಗೂ ಕಂಪನ್ನು ಹೊಂದಿರುವ ಚಿಕ್ಕಮಗಳೂರು ಮತ್ತು ಕೊಡಗಿನ ಅರೇಬಿಕಾ ಕಾಫಿ ವೈವಿಧ್ಯವನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು, ಕಾಫಿ ಎಕೋ ಟೂರಿಸಂ ಅಭಿವೃದ್ಧಿಪಡಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.
- ವಿಶೇಷ ಕಂಪು, ರುಚಿ, ಸೊಗಡಿನಿಂದ ಕೂಡಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು ಜಿಐ ಟ್ಯಾಗ್ ಹೊಂದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮಗಳನ್ನು ಉತ್ತೇಜಿಸಲಾಗುವುದು.
- ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಯ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಕ್ರಮ ವಹಿಸಲಾಗುವುದು.
- ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ತೋಟಗಾರಿಕೆ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʼವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು.
5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದ ಸಾಲ
- ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು.
- ರಾಮನಗರ ಹಾಗೂ ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶ್ಯಾದಲ್ಲಿಯೇ ಅತಿ ಹೆಚ್ಚು ವಹಿವಾಟು ನಡೆಯುತ್ತಿದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.
- ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ ವಾಣೀಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.
ಬಜೆಟ್ ಕುರಿತ ಇನ್ನಷ್ಟು ಸುದ್ದಿಗಳಿಗಾಗಿ: http://vistaranews.com/tag/karnataka-budget-2023