ಬೆಂಗಳೂರು: ರೈತರಿಗೆ ನೀಡಲಾಗುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ. ಗಳಿಂದ 5 ಲಕ್ಷ ರೂ. ಗಳಿಗೆ ಹೆಚ್ಚಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಈ ಅಂಶವನ್ನು ಇಂದಿನ ಬಜೆಟ್ನಲ್ಲಿ (Karnataka Budget 2023) ಮುಖ್ಯಮಂತ್ರಿ ಸಾದರಪಡಿಸಿದರು.
- ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ.
- ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂ. ವರೆಗಿನ ಸಾಲಕ್ಕೆ ರಾಜ್ಯ ಸರ್ಕಾರವು ಶೇ. 1ರಷ್ಟು ಬಡ್ಡಿ ಸಹಾಯಧನ ನೀಡಲಿದೆ.
- ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್ಅಪ್ ವ್ಯಾನ್ (Pick-up Van) ಖರೀದಿಸಲು ಏಳು ಲಕ್ಷ ರೂ. ವರೆಗಿನ ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ವಿತರಿಸಲಾಗುವುದು.
- ಶೀಘ್ರ ಹಾಳಾಗುವ ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರು ಒತ್ತಡದ ಮಾರಾಟ ಮಾಡುವುದನ್ನು ತಪ್ಪಿಸಿ, ನ್ಯಾಯಯುತ ಬೆಲೆ ಒದಗಿಸುವುದಕ್ಕೆ ನೆರವಾಗಲು ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ KAPPEC ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು. - ʼಕಾಯಕ ನಿಧಿ’ ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗುವುದು.