Site icon Vistara News

Karnataka Cabinet Expansion: ಸಚಿವರ ಪ್ರಮಾಣ ವಚನ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ

congress workers celebration

#image_title

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಶನಿವಾರ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಇದರಿಂದ ಸಿದ್ದರಾಮಯ್ಯ ಸಂಪುಟದ (Karnataka Cabinet Expansion) 34 ಸ್ಥಾನಗಳೂ ಭರ್ತಿಯಾದಂತಾಗಿದೆ. ಮತ್ತೊಂದೆಡೆ ತಮ್ಮ ನೆಚ್ಚಿನ ನಾಯಕರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ವಿವಿಧೆಡೆ ಕಾಂಗ್ರೆಸ್‌ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.

ಚಿಂತಾಮಣಿಯಲ್ಲಿ ಡಾ.ಎಂ.ಸಿ.ಸುಧಾಕರ್ ಅಭಿಮಾನಿಗಳಿಂದ ಸಂಭ್ರಮ

ಚಿಂತಾಮಣಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಸಿಹಿ ಹಂಚಿಕೆ

ಚಿಕ್ಕಬಳ್ಳಾಪುರ‌: ಶಾಸಕ ಡಾ‌.ಎಂ.ಸಿ.ಸುಧಾಕರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

2004 ಮತ್ತು 2008ರಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ ಸತತ ಎರಡು ಬಾರಿ ಸೋಲು ಕಂಡಿದ್ದ ಸಚಿವ ಡಾ. ಎಂ.ಸಿ. ಸುಧಾಕರ್ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈಗ ಸಿದ್ದರಾಮಯ್ಯ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಚಿಂತಾಮಣಿ ತಾಲೂಕು ಕಚೇರಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು.

ಇದನ್ನೂ ಓದಿ | Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ವಿಜಯಪುರದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ

ವಿಜಯಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

ವಿಜಯಪುರ: ಸಚಿವರಾಗಿ ಶಿವಾನಂದ ಪಾಟೀಲ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಚಾಂದನಿ ಹೋಟೆಲ್ ಎದುರು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ, ಸಚಿವ ಶಿವಾನಂದ ಪಾಟೀಲ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿ, ಶಿವಾನಂದ ಪಾಟೀಲ ಅವರು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು.

ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಮರಾಠಾ ಸಮಾಜದ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಕಾರವಾರದಲ್ಲಿ ಮಂಕಾಳು ವೈದ್ಯ ಅಭಿಮಾನಿಗಳಿಂದ ಸಿಹಿ ಹಂಚಿಕೆ

ಕಾರವಾರ: ಮಂಕಾಳು ವೈದ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾರವಾರದ ಸುಭಾಷ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಬಳಿಕ ಸಚಿವ ಮಂಕಾಳು ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಪರ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು.

ಕೊಪ್ಪಳದಲ್ಲಿ ಶಿವರಾಜ್ ತಂಗಡಗಿ ಅಭಿಮಾನಿಗಳ ಹರ್ಷ

ಕೊಪ್ಪಳ: ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ ಅವರು ಮೂರನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೊಪ್ಪಳದ ಅಶೋಕ ವೃತ್ತದಲ್ಲಿ ಭೋವಿ ಸಮಾಜದ ಬೆಂಬಲಿಗರು ಸಂಭ್ರಮಾಚರಣೆ ನಡೆಸಿ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ | Karnataka Cabinet expansion : 24 ನೂತನ ಸಚಿವರ ಸೇರ್ಪಡೆ: ಭರ್ತಿ ಸಂಪುಟದೊಂದಿಗೆ ಅಗ್ನಿ ಪರೀಕ್ಷೆಗಿಳಿದ ಸಿದ್ದರಾಮಯ್ಯ!

ಗದಗದಲ್ಲಿ ಎಚ್.ಕೆ.ಪಾಟೀಲ್‌ ಅಭಿಮಾನಿಗಳ ಸಂಭ್ರಮ

ಗದಗ: ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಪಾಟೀಲ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ಹಳೇ ಬಸ್ ನಿಲ್ದಾಣ ಬಳಿ ಅಭಿಮಾನಿಗಳು ಹಾಗೂ ಹಲವು‌ ಆಟೋ ಚಾಲಕರ ಸಂಘದ‌ ಸದಸ್ಯರು ಸಂಭ್ರಮಾಚರಣೆ ನಡೆಸಿದರು.

Exit mobile version