ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) 135 ಸ್ಥಾನಗಳನ್ನು ಗೆದ್ದುಕೊಂಡು ಬೀಗುತ್ತಿದ್ದರೂ ಮುಖ್ಯಮಂತ್ರಿ ಆಯ್ಕೆ ಗೊಂದಲದಲ್ಲಿರುವ ಕಾಂಗ್ರೆಸ್ ಹೈಕಮಾಂಡ್ (Congress High command), ಕೊನೆಗೂ ಬುಧವಾರ ಸಂಜೆ ಆರು ಗಂಟೆಗೆ ಹೊಸ ಮುಖ್ಯಮಂತ್ರಿಯ (Karnataka CM) ಘೋಷಣೆಯಾಗುವ ಸೂಚನೆ ಸಿಕ್ಕಿದೆ. ಈಗಾಗಲೇ ಗುರುವಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಇದರ ಜತೆಗೆ ಎಲ್ಲ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರಿಬ್ಬರೂ ದಿಲ್ಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆ ನಡೆಸುತ್ತಿದ್ದಾರೆ. ಈ ಮಾತುಕತೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಬಹುತೇಕ ತೀರ್ಮಾನ ಮಾಡಲಾಗಿದೆ. ಸಂಜೆ ಆರು ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾರು ಮುಖ್ಯಮಂತ್ರಿ ಎಂದು ಘೋಷಿಸುವ ಸಾಧ್ಯತೆಗಳಿವೆ.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಬ್ಬರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಈ ವೇಳೆ ಸಿದ್ದರಾಮಯ್ಯ ಅವರ ಆಯ್ಕೆಯ ಬಗ್ಗೆ ಬಹುತೇಕ ಅಂತಿಮ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ.
ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನಕ್ಕೆ ಸಿದ್ಧತೆ
ರಾಜ್ಯದ 24ನೇ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮೇ 18ರಂದು (ಗುರುವಾರ) ಸಂಜೆ 3.30ಕ್ಕೆ ಬೆಂಗಳೂರಿನ ಕಂಠೀರ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಹೇಳಲಾಗಿದ್ದು, ಅದಕ್ಕಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಿದ್ಧತೆ ಆರಂಭಿಸಿದೆ.
ಕಂಠೀರವ ಸ್ಟೇಡಿಯಂನಲ್ಲಿ ಸ್ಟೇಜ್ ಹಾಕಲು ಸಿದ್ಧತೆ ನಡೆಸಲಾಗುತ್ತಿದ್ದು, ಕ್ರೀಡಾಂಗಣದಲ್ಲಿ ಲೈಟಿಂಗ್ ಅಳವಡಿಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಅವಕಾಶ ಇದ್ದು, ಪ್ರತ್ಯೇಕ ವ್ಯವಸ್ಥೆ ಯನ್ನು ಮಾಡಲಾಗುತ್ತಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ವಿಶೇಷ ಸಂಚಾರಿ ಆಯುಕ್ತ ಸಲೀಂ, ಜಂಟಿ ಪೊಲೀಸ್ ಆಯುಕ್ತ ಅನುಚೇತ್, ವಿವಿಐಪಿ ವಿಭಾಗದ ಡಿಸಿಪಿ ಮಂಜುನಾಥ ಬಾಬು ಅವರು ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ನಾಗರತ್ನ ಅವರಿಂದ ಕಂಠೀರವ ಸ್ಟೇಡಿಯಂ ಪರೀಶೀಲನೆ ನಡೆಸಿದ್ದಾರೆ.
ಆಹ್ವಾನ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಹೆಸರು!?
ಈ ನಡುವೆ, ನಾಳಿನ ಪ್ರಮಾಣವಚನ ಸ್ವೀಕಾರಕ್ಕೆ ಸಂಬಂಧಿಸಿದ ಒಂದು ಆಮಂತ್ರಣ ಪತ್ರಿಕೆಯೂ ಓಡಾಡುತ್ತಿದ್ದು, ಅದು ಸತ್ಯವಲ್ಲ ಎಂಬ ಮಾಹಿತಿಯೂ ಇದೆ. ಈ ಆಮಂತ್ರಣ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಬರೆಯಲಾಗಿದೆ!
ಎಲ್ಲ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ಸೂಚನೆ
ಗುರುವಾರ ಸಂಜೆ 3.30ಕ್ಕೆ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವುದರಿಂದ ಎಲ್ಲ ಶಾಸಕರು ಬೆಂಗಳೂರಿಗೆ ಬರುವಂತೆ ಕಾಂಗ್ರೆಸ್ ಪಕ್ಷ ಸೂಚನೆ ನೀಡಿದೆ. ಇಂದೇ ಹೊರಟು ಬೆಂಗಳೂರು ತಲುಪುವಂತೆ ಪಕ್ಷದ ವತಿಯಿಂದ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Karnataka Election 2023 : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೇಮಕ? ನಾಳೆಯೇ ಪ್ರಮಾಣವಚನ