ಹುಬ್ಬಳ್ಳಿ, ಕರ್ನಾಟಕ: ಬಹಿರಂಗ ಪ್ರಚಾರಕ್ಕೆ ಇನ್ನು ನಾಲ್ಕೇ ದಿನ ಅವಕಾಶವಿದ್ದು, ಎಲ್ಲ ಪಕ್ಷಗಳು ತಮ್ಮ ಪ್ರಚಾರವನ್ನು ತೀವ್ರಗೊಳಿಸಿವೆ. ಕಾಂಗ್ರೆಸ್ ಪಕ್ಷದ ಪರವಾಗಿ ಈಗಾಗಲೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯದಲ್ಲಿ ವ್ಯಾಪಕ ಪ್ರಚಾರ ಕೈಗೊಂಡಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಎಂಟ್ರಿ ಕೊಡಲಿದ್ದಾರೆ. ಮೇ 6ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಸೋನಿಯಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ(Karnataka Election 2023).
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಮಾಜಿ ಸಿಎಂ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲೇ ಕಾಂಗ್ರೆಸ್ ಪಕ್ಷದ ಪ್ರಚಾರ ಕೈಗೊಳ್ಳಲು ಸೋನಿಯಾ ಗಾಂಧಿ ಆಗಮಿಸುತ್ತಿರುವುದರಿಂದ ಕುತೂಹಲ ಮೂಡಿದೆ.
ಕರ್ನಾಟಕದಲ್ಲಿ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅವರು ಕರ್ನಾಟಕಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿರುವ ಸೋನಿಯಾ ಗಾಂಧಿ.ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಸೋನಿಯಾ ಗಾಂಧಿ ಅವರು ಜಗದೀಶ್ ಶೆಟ್ಟರ್ ಮ್ತತು ಪ್ರಸಾದ್ ಅಬ್ಬಯ್ಯ ಪರ ಮತಯಾಚನೆ ಮಾಡಲಿದ್ದಾರೆ.
ಕಲಘಟಗಿಯಲ್ಲಿ ಲಾಡ್ ಭರ್ಜರಿ ಪ್ರಚಾರ
ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ವ್ಯಾಪ್ತಿಯ ಮನಸೂರ, ಮನಗುಂಡಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಕಾಂಗ್ರೆಸ್‌ನ ನಾಲ್ಕು ಗ್ಯಾರಂಟಿಗಳ ಮೂಲಕ ಮತದಾರರನ್ನು ಮನ ಒಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಭರ್ಜರಿ ಮತ ಬೇಟೆ ಮಾಡುತ್ತಿದ್ದಾರೆ. ಲಾಡ್‌ಗೆ ಸಾಥ್ ನೀಡಿರುವ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ಇದನ್ನೂ ಓದಿ: Karnataka Election: ಸೋನಿಯಾ ಗಾಂಧಿ ವಿಷ ಕನ್ಯೆ ಹೇಳಿಕೆ; ಯತ್ನಾಳ್ ವಿರುದ್ಧ ಮೈಸೂರಿನಲ್ಲಿ ದೂರು