ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅನ್ನು ಸಜ್ಜುಗೊಳಿಸುವ ಸಲುವಾಗಿ ಪಕ್ಷದ ಹಿರಿಯ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಸಂಬಂಧ ಪ್ರವಾಸ ಮಾರ್ಗದ ವಿವರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಪ್ರವಾಸವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಲು ಸಮನ್ವಯ ಸಮಿತಿಗೆ ಹೆಚ್ಚುವರಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯ ಪ್ರವಾಸವನ್ನು ವ್ಯವಸ್ಥಿತವಾಗಿ ಯಶಸ್ವಿಗೊಳಿಸಲು ದಕ್ಷಿಣ ಕರ್ನಾಟಕದ ಜಿಲ್ಲೆಗಳ ಪ್ರವಾಸ ಕಾರ್ಯಕ್ರಮದ ಉಸ್ತುವಾರಿಯನ್ನಾಗಿ ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ಹಾಗೂ ಇವರಿಗೆ ಸಹಕಾರಿಯಾಗಲು ಸಮನ್ವಯ ಸಮಿತಿಗೆ ಹೆಚ್ಚುವರಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಜತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎ. ಹುಸೇನ್ ಅವರನ್ನು ಸಮಿತಿಯ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಪ್ರವಾಸ ಕಾರ್ಯಕ್ರಮಕ್ಕೆ ಎಲ್ಲ ಕೆಪಿಸಿಸಿ ಉಸ್ತುವಾರಿ ಪದಾಧಿಕಾರಿಗಳು, ೨೦೨೩ರ ವಿಧಾನಸಭೆ ಚುನಾವಣೆ ಆಕಾಂಕ್ಷಿಗಳು, ಬ್ಲಾಕ್ ಕೋ ಆರ್ಡಿನೇಟರ್ಸ್, ಮುಂಚೂಣಿ ಘಟಕ, ಸೆಲ್, ವಿಭಾಗಗಳ ಜಿಲ್ಲಾ ಮುಖ್ಯಸ್ಥರು ಆಯಾ ಜಿಲ್ಲೆ ಮತ್ತು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಮನ್ವಯ ಸಮಿತಿಯೊಂದಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.
ಕಾಂಗ್ರೆಸ್ ಸಮನ್ವಯ ಸಮಿತಿ ಹೆಚ್ಚುವರಿ ಸದಸ್ಯರು
ಕೋಲಾರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಉಪಾಧ್ಯಕ್ಷ ನೇಮಕ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಎಂ. ಆರ್. ಸೀತಾರಾಮ್ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೆಪಿಸಿಸಿ ಉಸ್ತುವಾರಿ ಉಪಾಧ್ಯಕ್ಷರಾಗಿ ನಿಯೋಜಿಸಲಾಗಿದೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಕೋಲಾರ ಡಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಆದ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರನ್ನು ಹೆಚ್ಚುವರಿಯಾಗಿ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು. ಇದೀಗ ಕೆಪಿಸಿಸಿ ಉಪಾಧ್ಯಕ್ಷ ಎಂ. ಆರ್. ಸೀತಾರಾಮ್ ಈ ಹಿಂದೆ ನೇಮಿಸಿದಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರಾಗಿ ಮುಂದುವರಿದು ಕಾರ್ಯನಿರ್ವಹಿಸಲಿದ್ದಾರೆ. ಹಾಗೆಯೇ ಎಂ. ನಾರಾಯಣಸ್ವಾಮಿ ಅವರು ಎಂದಿನಂತೆ ಕೆಪಿಸಿಸಿ ಕಾರ್ಯಕ್ರಮ, ಸಭೆಗಳು ಹಾಗೂ ಕಂಟ್ರೋಲ್ ರೂಮ್ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | Karnataka Election : ನಾನು ಕೋಲಾರದಿಂದಲೇ ಸ್ಪರ್ಧೆ ಮಾಡುವೆ: ಸಿದ್ದರಾಮಯ್ಯ ಘೋಷಣೆ