ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಂತರ ರೂಪಾಯಿ ಅನುದಾನ ತಂದಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಅವರಿಂದಲೂ ಅನುದಾನ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ (Karnataka Election) ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಹೇಳಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹರಮಘಟ್ಟ ವ್ಯಾಪ್ತಿಯಲ್ಲಿ ಗ್ರಾಮದ ಪ್ರಮುಖರ ಮನೆಗಳಿಗೆ ಭೇಟಿ ಹಾಗೂ ಸಾರ್ವಜನಿಕರ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮಾತನಾಡಿದ ಅವರು, “ಪ್ರತಿಯೊಂದು ಗ್ರಾಮಗಳಲ್ಲಿಯೂ ಅಗತ್ಯ ಮೂಲಸೌಕರ್ಯ ಒದಗಿಸುವ ಕೆಲಸಗಳನ್ನು ಅಶೋಕ ನಾಯ್ಕ ಅವರು ಮಾಡಿದ್ದಾರೆ. ಅವರಿಗೆ ಮುಂದಿನ ಬಾರಿಯು ಅತಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಮಾಡಿಕೊಡಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.
ಉತ್ತರಾಖಂಡ ಮಾಜಿ ಎಂಎಲ್‌ಎ, ಶಿವಮೊಗ್ಗ ಗ್ರಾಮಾಂತರ ಚುನಾವಣಾ ಪ್ರಮುಖರಾದ ಮುಖೇಶ್ ಸಿಂಗ್ ಕೋಲಿ ಮಾತನಾಡಿ, “ಅಭಿವೃದ್ಧಿ ವೇಗವು ದ್ವಿಗುಣಗೊಳ್ಳಬೇಕಾದರೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿ ಇರುವುದು ಅತ್ಯಂತ ಮುಖ್ಯ. ದೇಶ, ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಜತೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು” ಎಂದು ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿ ಭಾರತ ಅತಿ ಸದೃಢ ದೇಶವಾಗಿ ಬೆಳೆಯುತ್ತಿದ್ದು, ವಿಶ್ವದ ಬಹುತೇಕ ದೇಶಗಳು ಭಾರತದ ನಾಯಕತ್ವವನ್ನು ಒಪ್ಪಿಕೊಂಡಿವೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರವು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮುನ್ನಡೆದಿದೆ. ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದು ತಿಳಿಸಿದರು.
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಮಾತನಾಡಿ, “ಐದು ವರ್ಷಗಳ ಅವಧಿಯಲ್ಲಿ ಎಲ್ಲ ಗ್ರಾಮಗಳಿಗೆ ಅವಶ್ಯಕವಿರುವ ಪ್ರಥಮ ಆದ್ಯತಾ ಕೆಲಸಗಳನ್ನು ಮಾಡಿದ್ದೇನೆ. ಸಂಪೂರ್ಣ ಅನುದಾನದ ಸದ್ಬಳಕೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದ ನಂತರ ಹೆಚ್ಚಿನ ಕೆಲಸಗಳನ್ನು ಮಾಡಲಾಗುತ್ತದೆ. ಗ್ರಾಮಾಂತರ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ” ಎಂದು ಹೇಳಿದರು.
ಕೆ.ಬಿ. ಅಶೋಕನಾಯ್ಕ ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಅನಾರೋಗ್ಯದಿಂದ ಇರುವ ಮುಖಂಡರನ್ನು ಭೇಟಿ ಆರೋಗ್ಯ ವಿಚಾರಿಸಿದರು. ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗಿರೀಶ್, ಪ್ರಮುಖರಾದ ಷಡಾಕ್ಷರಪ್ಪ, ವಿರೂಪಾಕ್ಷಪ್ಪ, ಅಶೋಕ್ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು. ಕ್ಷೇತ್ರ ಪ್ರಭಾರಿ ಎಸ್. ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಪ್ರಧಾನ ಕಾರ್ಯದರ್ಶಿ ಗೋಪಾಲ್, ಉಜ್ಜಿನಪ್ಪ, ಮಲ್ಲೇಶ್, ರಂಗೋಜಿರಾವ್ ಸೇರಿದಂತೆ ಪ್ರಮುಖರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.