ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ನಾಯಿ ಮರಿಯಂತೆ ಇರುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಸಿಎಂ ಬೊಮ್ಮಾಯಿ ಅವರಿಗಲ್ಲ, ರಾಜ್ಯದ ಜನತೆಗೆ ಮಾಡಿದ ಅಪಮಾನ (Karnataka Elections) ಎಂದು ಬಿಜೆಪಿ ನಾಯಕ ವ್ಯಾಖ್ಯಾನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ಈ ವಿಷಯದಲ್ಲಿ ತಿರುಗೇಟು ನೀಡಲು ಬಿಜೆಪಿ ನಿರ್ಧರಿಸಿದ್ದನ್ನು ಸ್ಪಷ್ಟಪಡಿಸಿದ್ದಾರೆ.
ಜನವರಿ ೫ರಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅವರು ಬುಧವಾರ ಸಂಜೆಯೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು. ಇದೇ ವೇಳೆ ರಾಜ್ಯದ ಹಲವು ನಾಯಕರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್‌ನ ಸಂಸ್ಕೃತಿಯನ್ನು ಸೂಚಿಸುತ್ತದೆ. ಅವರ ಈ ಹೇಳಿಕೆಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರ ನೀಡಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರ ರಚಿಸಲಿದೆ ಎಂದರು ಅರುಣ್ ಸಿಂಗ್.
ʻʻಬೊಮ್ಮಾಯಿ ಒಬ್ಬರು ಕಾಮನ್ ಮ್ಯಾನ್ ಸಿಎಂ. ಇದು ಬೊಮ್ಮಾಯಿ ಅವರಿಗೆ ಮಾಡಿದ ಅವಮಾನ ಅಲ್ಲ. ಇಡೀ ರಾಜ್ಯದ ಜನರಿಗೆ ಮಾಡಿದ ಅವಮಾನ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಉತ್ತರ ನೀಡಲಿದ್ದಾರೆʼʼ ಎಂದು ಅರುಣ್ ಸಿಂಗ್ ಹೇಳಿದರು.
ಎರಡು ದಿನದ ಕಾರ್ಯಕ್ರಮಗಳೇನು?
ಅರುಣ್ ಸಿಂಗ್ ಅವರು ಇನ್ನು ಎರಡು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ.
ಜನವರಿ 5ರಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ ನಡೆಸಲಿದ್ದಾರೆ. ಸಂಜೆ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಬಳಿಕ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆ ನಡೆಸಲಿದ್ದಾರೆ.
ಜನವರಿ 6ರಂದು ಅವರು ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅರುಣ್ ಸಿಂಗ್ ಅಂದು ಸಂಜೆ ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಳಿಕ ದೆಹಲಿಗೆ ತೆರಳಲಿದ್ದಾರೆ.
ಇದನ್ನೂ ಓದಿ | Karnataka Politics : ಸೋನಿಯಾ ಗಾಂಧಿ ಮುಂದೆ ಸಿದ್ದರಾಮಯ್ಯ ಇಲಿ, ಬೆಕ್ಕು, ಜಿರಳೆ ಆಗಿರುತ್ತಾರೆ: ಶ್ರೀರಾಮುಲು ತಿರುಗೇಟು