ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ (ಕರ್ನಾಟಕ ನಾಗರಿಕ ಸೇವೆ) ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ (Gazetted Probationary Post) ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 656 ಹುದ್ದೆಗಳ (Government Job) ಪೈಕಿ 504 ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.
ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಈ ಸಂಬಂಧ ಪದವೀಧರ ಕ್ಷೇತ್ರದ ಸದಸ್ಯ ನಿರಾಣಿ ಹಣಮಂತ್ ರುದ್ರಪ್ಪ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದರಲ್ಲಿ 504 ಹುದ್ದೆಗಳ ಭರ್ತಿಗೆ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಮೂಲಕ ಹಲವು ವರ್ಷಗಳಿಂದ ಕಾಯುತ್ತಿರುವ, ಸರ್ಕಾರಿ ಉದ್ಯೋಗದ ಕನಸು ಹೊತ್ತಿರುವ ಮಂದಿಗೆ ಗುಡ್ ನ್ಯೂಸ್ ಸಿಕ್ಕಂತೆ ಆಗಿದೆ.
ಯಾವೆಲ್ಲ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ?
ರಾಜ್ಯದ ಯಾವ ಯಾವ ಇಲಾಖೆಗಳಿಂದ ಖಾಲಿ ಇರುವ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ನಿರಾಣಿ ಹಣಮಂತ್ ರುದ್ರಪ್ಪ ಅವರು ಪ್ರಶ್ನೆ ಕೇಳಿದ್ದರು.
ಇದಕ್ಕೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ, ವಾಣಿಜ್ಯ ತೆರಿಗೆಗಳ ಇಲಾಖೆ, ಖಜಾನೆ ಇಲಾಖೆ, ಅಬಕಾರಿ ಇಲಾಖೆ, ಸಹಕಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳಿಂದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕ ಹುದ್ದೆಗಳ ಮಾಹಿತಿ ನೀಡಿದ ಸಿಎಂ
ಎಷ್ಟು ಕೆ.ಎ.ಎಸ್ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ? ಅವುಗಳಲ್ಲಿ ಎಷ್ಟು ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ? ಎಂದು ನಿರಾಣಿ ಹಣಮಂತ್ ರುದ್ರಪ್ಪ ವಿವರಗಳನ್ನು ಕೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುವ ಹುದ್ದೆಗಳ ವಿವರಗಳನ್ನು ನೀಡಿದ್ದಾರೆ.
ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?
ಕ್ರಮ ಸಂಖ್ಯೆ | ಇಲಾಖೆ | ಭರ್ತಿ ಮಾಡಿಕೊಳ್ಳಲು ಕೋರಲಾದ ಹುದ್ದೆಗಳ ಸಂಖ್ಯೆ | ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಹುದ್ದೆಗಳ ಸಂಖ್ಯೆ |
1 | ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ | 97 | 85 |
2 | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ | 59 | 55 |
3 | ಕಂದಾಯ ಇಲಾಖೆ | 129 | 76 |
4 | ಪೊಲೀಸ್ ಇಲಾಖೆ | 12 | 10 |
5 | ಕಾರಾಗೃಹ ಇಲಾಖೆ | 09 | 03 |
6 | ವಾಣಿಜ್ಯ ತೆರಿಗೆಗಳ ಇಲಾಖೆ | 143 | 140 |
7 | ಖಜಾನೆ ಇಲಾಖೆ | 69 | 48 |
8 | ಅಬಕಾರಿ ಇಲಾಖೆ | 13 | 10 |
9 | ಸಹಕಾರ ಇಲಾಖೆ | 26 | 21 |
10 | ಸಮಾಜ ಕಲ್ಯಾಣ ಇಲಾಖೆ | 54 | 27 |
11 | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | 13 | 07 |
12 | ಕಾರ್ಮಿಕ ಇಲಾಖೆ | 11 | 04 |
13 | ಕೌಶಲ್ಯಾಭಿವೃದ್ಧಿ ಇಲಾಖೆ | 11 | 03 |
14 | ಪ್ರವಾಸೋದ್ಯಮ ಇಲಾಖೆ | 02 | 02 |
15 | ಆಹಾರ ಮತ್ತು ನಾಗರಿಕ ಸರಬರಾಜು | 09 | 09 |
16 | ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ | 04 | 04 |
ಒಟ್ಟು | 656 | 504 |