ಕಾರವಾರ: ಮಳೆ ಅನಾಹುತರಿಂದ ಉಂಟಾದ ಜೀವ ಹಾನಿ, ಕೃಷಿ ಮತ್ತು ತೋಟಗಾರಿಕೆ ನಷ್ಟಕ್ಕೆ (Karnataka Rain) ಎನ್‌ಡಿಆರ್‌ಎಫ್ ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Karnataka Rain) ಸೂಚನೆ ನೀಡಿದರು.
ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.
ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಮಳೆ ಅನಾಹುತ ಮತ್ತು ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು. ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್‌ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ | Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್
ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ
ಶಿರೂರು: ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳದಲ್ಲಿ (Karnataka Rain) ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ NDRF, SDRF ತಂಡಗಳ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿರೂರು ಬಳಿ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.
ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು, ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ಮಾಡಬೇಕು ಎಂದ ಸಿಎಂ, ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದರು.
ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ
ಗುಡ್ಡ ಕುಸಿತ ಸ್ಥಳ ವೀಕ್ಷಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಸತೀಶ್ ಸೈಲ್ ಮತ್ತು ಅಧಿಕಾರಿಗಳು ಜೊತೆಗಿದ್ದರು.
ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?
ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮೆರಾಮನ್‌ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು.