ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ವರ್ಷವಿಡೀ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ʼಕರ್ನಾಟಕ ಸಂಭ್ರಮʼ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಘೋಷಣೆಯಡಿ 2023ರ ನ. 1 ರಿಂದ 2024ರ ನವೆಂಬರ್ 1 ರವರೆಗೆ ಕರ್ನಾಟಕ ಸಂಭ್ರಮ (Karnataka Sambhrama) ಆಚರಣೆಯಾಗಲಿದೆ.
ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು.
ಕರ್ನಾಟಕದ ದೇಶೀಯ ಸಂಸ್ಕೃತಿ ಹೆಚ್ಚು ಬಿಂಬಿತವಾಗಬೇಕು: ಸಿದ್ದರಾಮಯ್ಯ
ಸಭೆಯಲ್ಲ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕ ಸಂಭ್ರಮ-50 ಕಾರ್ಯಕ್ರಮದಲ್ಲಿ ದೇಶೀಯ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶೀಯ ಸಂಸ್ಕೃತಿ ಹೆಚ್ಚು ಬಿಂಬಿಸಬೇಕು. ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ಪರಿಚಯಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ | Raja Marga Column : ನಮ್ಮದು ಯುವ ಭಾರತ; ಇಷ್ಟೊಂದು ಯುವ ಶಕ್ತಿ ಯಾವ ದೇಶದಲ್ಲೂ ಇಲ್ಲ!
ಈ ವೇಳೆ ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಸ್ಮಾರಕ ಅಭಿವೃದ್ಧಿ, ಜೀರ್ಣೋದ್ಧಾರ
ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ದಿ. ಅದರಗುಂಚಿ ಶಂಕರಗೌಡ , ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ. ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.
ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ
ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ, ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡುವುದು ಹಾಗೂ ನವೆಂಬರ್ 2024ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕರ್ನಾಟಕ ಸಂಭ್ರಮ-50 ಲಾಂಛನ
ಕರ್ನಾಟಕ ಸಂಭ್ರಮ – 50 ಕಾರ್ಯಕ್ರಮದ ಲಾಂಛನವನ್ನು ಅಕ್ಟೋಬರ್ 17 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು.
ಇದನ್ನೂ ಓದಿ | Banjara Bhavan: 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ: ಸಿದ್ದರಾಮಯ್ಯ
ಹಿಂದಿನ ಸರ್ಕಾರದ ನಿರ್ಲಕ್ಷ್ಯ ಸಲ್ಲ
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ನೇ ವರ್ಷವನ್ನು ಹಿಂದಿನ ಸರ್ಕಾರ ವೈಭವದಿಂದ ಆಚರಿಸಬೇಕಿತ್ತು. ಅಂದರೆ 2022ರ ನ.1 ರಿಂದ 2023ರ ನ.1 ರವರೆಗೆ ಆಚರಿಸಬೇಕಿತ್ತು. ಹಿಂದಿನ ಸರ್ಕಾರ ಏಕೆ ಆಚರಿಸಲಿಲ್ಲ ? ಈ ನಿರ್ಲಕ್ಷ್ಯ ಸರಿನಾ ? ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು. ಈಗ 50 ವರ್ಷ ತುಂಬಿ 51ನೇ ವರ್ಷಕ್ಕೆ ಕಾಲಿಡಲಿದೆ. 50ನೇ ವರ್ಷಾಚರಣೆಯನ್ನು 2022ರ ನವೆಂಬರ್ 1 ರಂದೇ ಆಚರಿಸಬೇಕಿತ್ತು. ಹಿಂದಿನ ಸರ್ಕಾರ ಈ ವಿಚಾರದಲ್ಲಿ ಎಡವಿದೆ. 50 ವರ್ಷ ತುಂಬಿದ ನಂತರ ಮಾಡಲು ಹೊರಟರೆ ಅದಕ್ಕೆ ಮಹತ್ವವಿರುತ್ತದೆಯೇ ಪ್ರಶ್ನಿಸಿದ ಮುಖ್ಯಮಂತ್ರಿಗಳು, ಕೊನೆಗೆ 2023ರ ನ. 1 ರಿಂದ 2024ರ ನವೆಂಬರ್ 1 ರವರೆಗೆ ಕರ್ನಾಟಕ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿ ಎನ್ನುವ ತೀರ್ಮಾನ ತೆಗೆದುಕೊಂಡರು.