ಬೆಂಗಳೂರು: ನ.12ರಂದು ರಾಜ್ಯಾದ್ಯಂತ ಒಣಹವೆ ಇತ್ತು. ಕಡಿಮೆ ಉಷ್ಣಾಂಶವು ವಿಜಯಪುರದಲ್ಲಿ 15.5 ಡಿ.ಸೆ ದಾಖಲಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ಮೈಸೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದ ಅಲ್ಲಲ್ಲಿ ಮಳೆಯಾಗಬಹುದು. ಕೆಲವು ಕಡೆ ಮೋಡ ಕವಿದ ವಾತಾವರಣ ಇರಬಹುದು.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಒಣಹವೆಯೇ ಇರಲಿದೆ. ಇತ್ತ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ, ಯಾದಗಿರಿಯಲ್ಲೂ ಒಣಹವೆ ಇರಲಿದೆ.
ಬೆಂಗಳೂರಲ್ಲಿ ವೇಗವಾಗಿ ಬೀಸುವ ಗಾಳಿ
ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತಾಪಮಾನ ಎಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸೆಕೆಯಾಗುವ ವಾತಾವರಣ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.