ಬೆಂಗಳೂರು: ಆ.27ರಂದು ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆ (KAS Prelims Exam) ನಡೆಯಲಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗಲು ಹೆಚ್ಚುವರಿ ಸರ್ಕಾರಿ ಬಸ್‌ಗಳನ್ನು ನಿಯೋಜಿಸಲು ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ಸರ್ಕಾರದ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ. ಎಸ್ ಆದೇಶ ಹೊರಡಿಸಿದ್ದಾರೆ. ನಾಳೆ 2 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಅವರ ಓಡಾಟಕ್ಕೆ ಅನುವಾಗುವಂತೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ | Sangolli Rayanna Statue: ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು; ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರೆ ಜಿಲ್ಲೆಗಳಿಗೆ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.
ಹೀಗಾಗಿ ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿರವರು ಕೋರಿದ್ದರು. ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅಡಚಣೆಯಾಗದಂತೆ ನಾಳೆ ವಿಭಾಗದ ವತಿಯಿಂದ ಪ್ರಮುಖ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ಥಾನ ಸ್ಥಳಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ರಾಜಭವನ ಚಲೋ ಹಿನ್ನೆಲೆ ಬೆಂಗಳೂರಿನಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ
ಮುಡಾ ಕೇಸ್ ವಿರುದ್ಧ ವಿಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಆ.29ರಂದು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಪ್ರತಿಭಟನೆಗೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಜನ ಜಮಾವಣೆ ಆಗುವ ಸಾಧ್ಯತೆ ಇದೆ. ಮೈಸೂರು, ತುಮಕೂರು, ಬಳ್ಳಾರಿ, ಕನಕಪುರ ಹಳೆ ಮದ್ರಾಸ್ ರಸ್ತೆ ಕಡೆಯಿಂದ ಜನರು ಬರಲಿದ್ದಾರೆ. ಈ ಕಾರಣಕ್ಕೆ ಫ್ರೀಡಂ ಪಾರ್ಕ್ ಬಳಿ ಭಾರಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಗೆ ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಖೋಡೆ ಸರ್ಕಲ್ ಮಾರ್ಗ ಬಳಸುವರು ಪರ್ಯಾಯ ಮಾರ್ಗ ಬಳಸಲು ಪೊಲೀಸರು ಸೂಚನೆ ನೀಡಿದ್ದಾರೆ. ಇನ್ನು ಕೆ.ಪಿಎಸ್.ಸಿ ಪರೀಕ್ಷೆಗೆ ತೆರಳುವವರು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.