ಬೆಂಗಳೂರು: ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ (Umesh Katti) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ʻʻಅವರೊಬ್ಬರು ಅನುಭವಿ ನಾಯಕರಾಗಿದ್ದರು. ಕರ್ನಾಟಕದ ಅಭಿವೃದ್ಧಿ ಸಾಕಷ್ಟು ಕೊಡುಗೆ ನೀಡಿದವರು. ಅವರ ನಿಧನ ನನಗೆ ನೋವುಂಟುಮಾಡಿದೆ. ಅವರ ಮನೆಯವರು ಬೆಂಬಲಿಗರಿಗೆ ಸಂಕಷ್ಟ ಕಾಲದಲ್ಲಿ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವೆ. ಓಂ ಶಾಂತಿʼʼ ಎಂದು ಟ್ವೀಟ್ ಮಾಡಿದ್ದಾರೆ.
ದೇವೇಗೌಡರಿಂದ ಸಂತಾಪ
ʻʻಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾಗಿದ್ದ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓ ಶಾಂತಿ.ʼʼ ಎಂದು ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಕಂಬನಿ
ʻʻಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿʼʼ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಅವರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: Katti no more| ಕತ್ತಿ ನನ್ನ ಫ್ರೆಂಡ್, ಆರೋಗ್ಯದ ಬಗ್ಗೆ ಸ್ವಲ್ಪ ನಿರ್ಲಕ್ಷ್ಯ ಇತ್ತು ಅನಿಸ್ತದೆ: ಸಿದ್ದರಾಮಯ್ಯ ಕಂಬನಿ