ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಮೊದಲ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ , ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೆ ಘೋಷಿಸಲಾಗಿದೆ.
ಸರ್ಕಾರದ ನವೋದ್ಯಮ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ನೇತೃತ್ವದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ಜೂನ್ 27ರಂದು ನಡೆಯಲಿರುವ ಕೆಂಪೇಗೌಡರ ಜಯಂತಿಯ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಕಳೆದ ವಾರವಷ್ಟೇ ಈ ಪ್ರಶಸ್ತಿ ಸ್ಥಾಪನೆಯ ಕುರಿತು ಐಟಿಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಪ್ರಕಟಿಸಿದ್ದರು. ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದರು.
ಉದ್ಯಮಿ ಟಿ.ವಿ.ಮೋಹನದಾಸ್ ಪೈ, ವಿದ್ವಾಂಸ ಡಾ. ರಾಮಸ್ವಾಮಿ ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ. ಶಂಕರಲಿಂಗೇಗೌಡ ಅವರು ಈ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು. ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ ಅವರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ ಎಸ್ ಎಂ ಕೃಷ್ಣ ಅವರಿಗೆ ಮೊದಲ ಪ್ರಶಸ್ತಿಯನ್ನು ನೀಡುವ ಮೂಲಕ ಗೌರವಿಸಲಾಗುತ್ತಿದೆ. ಅದೇ ರೀತಿಯಾಗಿ ಇನ್ಫೋಸಿಸ್ ಸಂಸ್ಥೆಯನ್ನು ಸ್ಥಾಪಿಸುವುದರ ಮೂಲಕ ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಐಟಿ ಸಿಟಿಯಾಗಿ ಬೆಳೆಸಿದ ನಾರಾಯಣ ಮೂರ್ತಿಯವರನ್ನು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಸಾಧನೆಗೆ ಪ್ರಕಾಶ್ ಪಡುಕೋಣೆಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ | ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: ಜೂನ್ 27ಕ್ಕೆ ಪ್ರದಾನ