ಮಂಗಳೂರು: ಟೀಮ್ ಇಂಡಿಯಾ ಕ್ರಿಕೆಟಿಗ ಕೆ.ಎಲ್ ರಾಹುಲ್(KL Rahul) ಅವರು ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ(Veerendra Heggade) ಅವರ ಆಶೀರ್ವಾದ ಪಡೆದರು. ಇದೇ ವೇಳೆ ವೀರೇಂದ್ರ ಹೆಗ್ಗಡೆ ಅವರು ರಾಹುಲ್ಗೆ ಕಂಚಿನ ಗೋವಿನ ಪ್ರತಿಮೆ ಮತ್ತು ಬೆಳ್ಳಿ ನಾಣ್ಯ ನೀಡಿ ಶಾಲು ಹೊದಿಸಿ ಗೌರವಿಸಿದರು.
ಕಳೆದ ನವೆಂಬರ್ನಲ್ಲಿ ರಾಹುಲ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ(kukke subramanya) ತಮ್ಮ ಸ್ನೇಹಿತರೊಂದಿಗೆ ಆಗಮಿಸಿ, ದೇವರ ದರ್ಶನ ಪಡೆದಿದ್ದರು. ಸದ್ಯ ರಾಹುಲ್ ಅವರು ಶಸ್ತ್ರಚಿಕಿತ್ಸಗೆ ಒಳಗಾಗಿ ಚೇತರಿಸಿಕೊಂಡು ಬೆಂಗಳೂರಿನ ಎನ್ಸಿಎಯಲ್ಲಿ ಫಿಟ್ನೆಸ್ ಅಭ್ಯಾಸ ನಡೆಸುತ್ತಿದ್ದಾರೆ. ಬಿಡುವಿನ ವೇಳೆ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.
ರಾಹುಲ್ ಅವರು ಏಷ್ಯಾ ಕಪ್ ವೇಳೆ ಭಾರತ ತಂಡಕ್ಕೆ ಆಗಮಿಸುವ ಸಾಧ್ಯತೆ ಇದೆ. ಸದ್ಯ ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡಿರುವ ಅವರು ಟೀಮ್ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯಬೇಕಿದ್ದರೆ ಮುಂಬರುವ ಟೂರ್ನಿಯಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರಲೇ ಬೇಕಾದ ಅನಿವಾರ್ಯತೆ ಇದೆ. ಇಲ್ಲವಾದಲ್ಲಿ ಇದೇ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಭಾರತದಲ್ಲೇ ನಡೆಯಲಿರುವ ಏಕದಿನ ವಿಶ್ವ ಕಪ್ ತಂಡದಲ್ಲಿ ಅವಕಾಶ ವಂಚಿತರಾದರೂ ಅಚ್ಚರಿಯಿಲ್ಲ.
ಇದನ್ನೂ ಓದಿ KL Rahul | ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಟೀಮ್ ಇಂಡಿಯಾ ಕ್ರಿಕೆಟಿಗ ಕೆ.ಎಲ್. ರಾಹುಲ್
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದ ರಾಹುಲ್, ಐಪಿಎಲ್ ಪಂದ್ಯಾಟದ ಸಮಯದಲ್ಲಿ ಗಾಯಗೊಂಡಿದ್ದರು. ಆಗ ಅವರಿಗೆ ತೊಡೆಯ ಶಸ್ತ್ರಚಿಕಿತ್ಸೆಯನ್ನು ಶಿಫಾರಸು ಮಾಡಲಾಗಿತ್ತು. ಬಳಿಕ ಪಂದ್ಯಾವಳಿಯಿಂದ ಹೊರಗುಳಿದಿದ್ದ ಅವರು ಬ್ರಿಟನ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾದರು. ಇದರಿಂದಾಗಿ ಅವರು ಐಪಿಎಲ್ ಹಾಗೂ ನಂತರದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಿಂದಲೂ ಹೊರಗುಳಿಯಬೇಕಾಯಿತು. ಇತೀಚೆಗೆ ರಾಹುಲ್ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿಗೆ ಧನಸಹಾಯ ಮಾಡಿ ಸುದ್ದಿಯಾಗಿದ್ದರು. ತಾಯಿ ಇಲ್ಲದ ಅನಾಥ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಓದುವ ಕನಸಿಗೆ ನೀರೆರೆದು ಪೋಷಿಸಲು ಧನಸಹಾಯ ಮಾಡಿದ್ದರು.