ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡಿದರೆ ನನ್ನ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧ, ಒಂದು ವೇಳೆ ಅವರು ಕ್ಷೇತ್ರಕ್ಕೆ ಬಾರದೆ ಇದ್ದರೆ ನಾನೇ ಅಭ್ಯರ್ಥಿ ಎಂದು ಶಾಸಕ ಕೆ. ಶ್ರೀನಿವಾಸಗೌಡ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರಕ್ಕೆ ಬನ್ನಿ ಎಂದು ನಾನೇ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದೇನೆ. ಅವರು ಬಂದರೆ ನಾನು ಕೋಲಾರದಲ್ಲಿ ಸ್ಪರ್ಧೆ ಮಾಡುವುದಿಲ್ಲ. ನಾನು ಶಾಸಕ ಹಾಗೂ ಸಚಿವರಾಗಿ ಕೆಲಸ ಮಾಡಿದ್ದೇನೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ರಾಜಕಾರಣ ಗೊತ್ತಿದೆ. ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಜಿಲ್ಲೆಯ ಶಾಸಕರಿಗೆ ಕಿರುಕುಳ ನೀಡಿದ್ದಾರೆ. 7 ಬಾರಿ ಮುನಿಯಪ್ಪ ಸಂಸದರಾಗಿದ್ದರೂ ಜಿಲ್ಲೆಗೆ ಅವರ ಕೊಡುಗೆ ಶೂನ್ಯ ಎಂದು ಕಿಡಿಕಾರಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮಧ್ಯೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರು ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೋಲಾರದಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ | ಹುಟ್ಟುಹಬ್ಬದ ಬದಲಿಗೆ ಬುದ್ಧ-ಬಸವ-ಅಂಬೇಡ್ಕರ್ ಆಶಯ ಪಾಲಿಸಿ: ಸಿದ್ದರಾಮಯ್ಯಗೆ ಖರ್ಗೆ ಎದಿರೇಟು