ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವದ ಗೃಹ ಜ್ಯೋತಿ ಯೋಜನೆಗೆ (Gruha Jyothi scheme) ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಿದ್ಯುಕ್ತ ಚಾಲನೆ ನೀಡಿದರು.
ನಗರದ ಸಾಹಿತ್ಯ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೆಲ ಫಲಾನುಭವಿಗಳಿಗೆ ಶೂನ್ಯ ಬಿಲ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ಸಾರ್ವಜನಿಕರಿಗೆ ಅನುಕೂಲವಾಗಲು ಗೃಹಜ್ಯೋತಿ ಯೋಜನೆ ಜಾರಿಗೊಳಿಸಲಾಗಿದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಅವಶ್ಯಕತೆ ಇದೆ ಎಂಬಯದನ್ನರಿತು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡುತ್ತಿದೆ.
ಇದನ್ನೂ ಓದಿ: ಬೆಂಗಳೂರಿಗರೇ ಗುಡ್ ನ್ಯೂಸ್; ಕಡಿಮೆ ದರದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್ ಸೇವೆ!
ಕೊಪ್ಪಳ ಜಿಲ್ಲೆಯಲ್ಲಿ ಈ ಯೋಜನೆಯಡಿ 2,41,545 ಗ್ರಾಹಕರು ನೋಂದಣಿ ಮಾಡಿಕೊಂಡು ಜುಲೈ 27ರ ಅಂತ್ಯಕ್ಕೆ ಶೇಕಡವಾರು 81.29 ಪ್ರಗತಿ ಆಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಆರ್ಥಿಕವಾಗಿ ದುರ್ಬಲರಾದವರಿಗೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇದುವರೆಗೆ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದರು.
ಇದನ್ನೂ ಓದಿ: Express Highway : ಹೆದ್ದಾರಿ ಪ್ರಯಾಣಿಕರ ಸುರಕ್ಷತೆಗೆ ಬಂದಿದೆ ಹೊಸ ಮೊಬೈಲ್ ಆ್ಯಪ್; ಏನೇನಿದೆ ಅದರಲ್ಲಿ?
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಜೆಸ್ಕಾಂನ ಕಾರ್ಯ ಮತ್ತು ಪಾಲನ ವೃತ್ತ ಕೊಪ್ಪಳದ ಕಾರ್ಯನಿರ್ವಾಹಕ ಅಭಿಯಂತರರಾದ ಮಹೇಶ, ಕೊಪ್ಪಳ ವಿಭಾಗದ ಜೆಸ್ಕಾಂ ಅಧಿಕಾರಿ ಫಣಿ ರಾಜೇಶ, ಗಂಗಾವತಿ ವಿಭಾಗದ ಜೆಸ್ಕಾಂ ಅಧಿಕಾರಿ ರಿಯಾಜ್ ಅಹ್ಮದ್ ಸೇರಿದಂತೆ ಜೆಸ್ಕಾಂನ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.