ಕಾರಟಗಿ: ಸರಿಯಾಗಿ ಮಳೆ ಬಾರದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರು (Drinking Water), ದನಕರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕಿ ಕೆ.ವಿ. ಕಾವ್ಯರಾಣಿ ತಿಳಿಸಿದರು.
ಪಟ್ಟಣದ ಎಪಿಎಂಸಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಳೆಯಾಗಿದ್ದು, ಸಕಾಲದಲ್ಲಿ ಸರಿಯಾದ ಮಳೆಯಾಗಿದ್ದರೆ ನೀರಿನ ಸಮಸ್ಯೆಯಾಗುತ್ತಿರಲಿಲ್ಲ. ಸರ್ಕಾರದಿಂದ ಈಗಾಗಲೇ ಬರ ಪೀಡಿತ ತಾಲೂಕವೆಂದು ಘೋಷಣೆಯಾಗಿದೆ. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Cyber Crime: ಆನ್‌ಲೈನ್ ಉದ್ಯೋಗದ ಹೆಸರಿನಲ್ಲಿ ವಂಚಿಸುತ್ತಿದ್ದ 100 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ
ಅದೇ ರೀತಿ ರೈತರ ಬೆಳೆ ಹಾನಿ ಸಮೀಕ್ಷೆ ವರದಿ, ದನಕರುಗಳಿಗೆ ಸರಿಯಾಗಿ ಕುಡಿಯುವ ನೀರಿನ ಸರಬರಾಜು, ನರೇಗಾದಡಿ ಕೂಲಿಕಾರರಿಗೆ ಕೆಲಸ ನೀಡುವುದು ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೃಷಿ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜೆಸ್ಕಾಂ, ಸಮುದಾಯ ಆರೋಗ್ಯ ಕೇಂದ್ರ, ಪಶು ಸಂಗೋಪನೆ, ಸೇರಿದಂತೆ ಇನ್ನಿತರೆ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆಗಳ ಪ್ರಗತಿ ವರದಿಯನ್ನು ಮಂಡಿಸಿದರು.
ಇದನ್ನೂ ಓದಿ: Rishabh Pant: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಪಂತ್; ಈ ಸರಣಿಯಲ್ಲಿ ಕಣಕ್ಕೆ!
ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ.ಕುಮಾರಸ್ವಾಮಿ, ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ, ಪುರಸಭಾ ಮುಖ್ಯಾಧಿಕಾರಿ ಸುರೇಶ್ ಎಸ್, ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾ.ಪಂ ಯೋಜನಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾ.ಪಂ ಸಿಬ್ಬಂದಿ ಉಪಸ್ಥಿತರಿದ್ದರು.