ಗಂಗಾವತಿ: ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ (Dr. B.R. Ambedkar Statue) ಅಪರಿಚಿತ ದುಷ್ಕರ್ಮಿಗಳು ಟೊಮೆಟೋ ಸಾಸ್ ಎರಚಿ ಅಪಮಾನ ಮಾಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆಯೆ ಸ್ಥಳದಲ್ಲಿ ಜಮಾಯಿಸಿದ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳ ಪ್ರಮುಖರು, ರಾಷ್ಟ್ರನಾಯಕ ಅಂಬೇಡ್ಕರ್ ಅವರ ಪುತ್ಥಳಿಗೆ ಅಪಮಾನ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ, ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿ ಆಗಮಿಸುವವರೆಗೂ ಧರಣಿ ಹಿಂತೆಗೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ಇದನ್ನೂ ಓದಿ: Dog Love : ಓಡೋಡಿ ಬಂದು ಮೇಕೆ ಮರಿಗೆ ಹಾಲುಣಿಸುವ ಶ್ವಾನ! ಮಾತೃತ್ವಕ್ಕೆ ಮಾರುಹೋದ ಜನ
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ನಗರ ಠಾಣೆಯ ಪಿಐ ಪ್ರಕಾಶ್ ಮಾಳೆ, ತಹಸೀಲ್ದಾರ್ ನಾಗರಾಜ್, ಪೌರಾಯುಕ್ತ ಆರ್. ವಿರೂಪಾಕ್ಷಮೂರ್ತಿ ಆಗಮಿಸಿ, ಕ್ರಮದ ಬಗ್ಗೆ ಭರವಸೆ ನೀಡಿದರು. ಆದರೆ ಧರಣಿ ಹಿಂತೆಗೆತಕ್ಕೆ ಪ್ರತಿಭಟನಾಕಾರರು ಒಪ್ಪಲಿಲ್ಲ.
ಸ್ಥಳಕ್ಕೆ ಆಗಮಿಸಿದ ಶಾಸಕ ಜಿ. ಜನಾರ್ದನ ರೆಡ್ಡಿ ಮಾತನಾಡಿ, ಆರೋಪಿಗಳ ಪತ್ತೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೆ ಕಾಲಾವಕಾಶ ನೀಡೋಣ. ಅಲ್ಲದೇ ಇಂದಿನಿಂದಲೇ ಅಂಬೇಡ್ಕರ್ ವೃತ್ತದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಇಡೀ ನಗರದ ಪ್ರಮುಖ ವೃತ್ತ, ರಸ್ತೆ ಸೇರಿದಂತೆ ಆಯಕಟ್ಟಿನ ಜಾಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಈಗಾಗಲೇ ಪೊಲೀಸ್ ಇಲಾಖೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 60 ಲಕ್ಷ ರೂಪಾಯಿ ಬಿಡುಗಡೆಯಾಗಿದೆ ಎಂದು ಈ ವೇಳೆ ತಿಳಿಸಿದರು.
ಮಾಜಿ ಶಾಸಕ ಖಂಡನೆ
ನಗರದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಟೊಮೆಟೊ ಸಾಸ್ ಎರಚಿ ಅಪಮಾನ ಮಾಡಿರುವ ಕಿಡಿಗೇಡಿಗಳ ಕೃತ್ಯವನ್ನು ಮಾಜಿ ಶಾಸಕ ಪರಣ್ಣ ಮುನವಳ್ಳಿ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಆರೋಪಿಗಳನ್ನು ಕೂಡಲೆ ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Hyundai Creta facelift : ಹೀಗಿದೆ ನೋಡಿ ಎಲ್ಲರ ಅಚ್ಚುಮೆಚ್ಚಿನ ಕ್ರೆಟಾ ಕಾರಿನ ಹೊಸ ವಿನ್ಯಾಸ
ಮಾಜಿ ಶಾಸಕ ಎಚ್.ಆರ್. ಶ್ರೀನಾಥ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು.