ಕೊಪ್ಪಳ: ಬೇಸಿಗೆ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಲೋಪವಾಗದ ಹಾಗೆ ಸಮರ್ಪಕವಾಗಿ ಜನರಿಗೆ ಕುಡಿಯುವ ನೀರು (Drinking Water) ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ (Koppala News) ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕುಡಿಯುವ ನೀರಿನ ಸಮಸ್ಯೆಯ ಕುರಿತು ಚರ್ಚಿಸಿ, ಅವರು ಮಾತನಾಡಿದರು.
ನೀರು ಸಿಗುವ ಕಡೆಗೆ ಕೊಳವೆಬಾವಿ ಕೊರೆಯಿಸುವ ಹಾಗೂ ನೀರು ಇಲ್ಲದ ಕಡೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯವನ್ನು ಮೂರು ತಿಂಗಳ ಕಾಲ ನಿರಂತರವಾಗಿ, ಯುದ್ಧೋಪಾದಿ ರೀತಿಯಲ್ಲಿ ನಡೆಸಬೇಕು ಎಂದು ಸಚಿವರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇದನ್ನೂ ಓದಿ: Vande Bharat: ಮದುರೈನಿಂದ ಬೆಂಗಳೂರಿಗೆ ಶೀಘ್ರವೇ ವಂದೇ ಭಾರತ್ ರೈಲು; ಬೆಲೆ ಎಷ್ಟು?
ಎಲ್ಲಾ ತಾಲೂಕುಗಳ ತಹಸೀಲ್ ಕಚೇರಿಗಳಲ್ಲಿ ತಾಪಂ ಇಒ ಕಚೇರಿಗಳ ಮುಂದೆ ಸಹಾಯವಾಣಿ ಸಂಖ್ಯೆಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಿ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದು ಎಲ್ಲ ತಹಸೀಲ್ದಾರರು ಮತ್ತು ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.
ತಹಸೀಲ್ದಾರರು ಹಾಗೂ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಕಾಲಕಾಲಕ್ಕೆ ಕ್ಷೇತ್ರ ಭೇಟಿ ನಡೆಸಬೇಕು. ಪ್ರತಿ ದಿನ ಎರಡು ಪಂಚಾಯಿತಿಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತನಾಡಿ ಸಮನ್ವಯ ನಡೆಸಿದ ಬಗ್ಗೆ ಡೈರಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲ ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಪ್ರತಿ ದಿನ ಎರಡು ವಾರ್ಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತನಾಡಿ ಸ್ಪಂದನೆ ನೀಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಇದನ್ನೂ ಓದಿ: Facebook Server: ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸರ್ವರ್ ಡೌನ್; ನಿಮ್ಮ ಖಾತೆ ಚೆಕ್ ಮಾಡಿಕೊಳ್ಳಿ
ಪಿಡಿಒಗಳಿಗೆ ಸೂಚನೆ
ಕೆಲವು ಪಿಡಿಒಗಳ ಕಾರ್ಯವೈಖರಿ ಸರಿ ಇಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಸಚಿವರು, ವಾಟರಮನ್‌ಗಳು ಮತ್ತು ಪಿಡಿಒಗಳು ಸರಿಯಾಗಿ ಕಾರ್ಯನಿರ್ವಹಿಸಿ ಜನತೆಗೆ ಸ್ಪಂದನೆ ನೀಡಬೇಕು ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಮುಂದಿನ 3 ತಿಂಗಳಲ್ಲಿ 151 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಬರಬಹುದು ಎಂದು ಅಂದಾಜಿಸಲಾಗಿದೆ. ಕಾಲಕಾಲಕ್ಕೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಕುಡಿಯುವ ನೀರು, ಮೇವು ಪೂರೈಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚಿಸಿ ಬೇಸಿಗೆ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: WPL 2024: ಕನ್ನಡತಿ ವೃಂದಾ ದಿನೇಶ್ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಉಮಾ ಚೆಟ್ರಿ ಆಯ್ಕೆ
ಸಭೆಯಲ್ಲಿ ಶಾಸಕರಾದ ದೊಡ್ಡನಗೌಡ ಪಾಟೀಲ, ರಾಘವೇಂದ್ರ ಹಿಟ್ನಾಳ, ಜನಾರ್ಧನ ರೆಡ್ಡಿ ಹಾಗೂ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗತ್ತಿ ಹಾಗೂ ತಹಸೀಲ್ದಾರರು ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.