Site icon Vistara News

Dharwad Krishi Mela: ಕೃಷಿ ಮೇಳಗಳು ಜಾತ್ರೆಗಳಾಗದೇ ವ್ಯವಸಾಯಕ್ಕೆ ಯುವಕರನ್ನು ಸೆಳೆಯಬೇಕು: ಸಿಎಂ ಸಿದ್ದರಾಮಯ್ಯ

Siddaramaiah in Dharwad Krishi Mela

ಧಾರವಾಡ: ಯುವಕರು ಸೇರಿ ಹೆಚ್ಚು ಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು (Dharwad Krishi Mela) ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ. ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ ಮಾತನಾಡಿದ ಅವರು, ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಹೀಗಾಗಿ ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು. ಲ್ಯಾಬ್ ಟು ಲ್ಯಾಂಡ್ ಅಂದರೆ ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ | BJP-JDS Alliance : ಆವತ್ತು ನಾನು ಜೆಡಿಎಸ್‌ ಬಿಜೆಪಿಯ ಬಿಟೀಂ ಅಂದಾಗ ಸಿಟ್ಟಾಗಿದ್ರಲ್ಲಾ? ಈಗ ಏನು ಹೇಳ್ತಾರೆ; ಸಿದ್ದರಾಮಯ್ಯ ಪ್ರಶ್ನೆ

ರೈತರಿಗೆ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರ

ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವುದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

ಕೋರಮಂಗಲ ಚಲ್ಲಘಟ್ಟ(ಕೆಸಿ) ವ್ಯಾಲಿ ಮೂಲಕ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ, ನೀರಾವರಿಗೆ ಅನುಕೂಲ ಮಾಡಲಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ

ರಾಜ್ಯ ಸರ್ಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ. 3 ರಷ್ಟು ಬಡ್ಡಿ ನಿಗದಿಗೊಳಿಸಿ, ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹದಾಯಿ ಯೋಜನೆಗೆ ಬದ್ಧ

ಮಹಾದಾಯಿ ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಇದರ ಬಗ್ಗೆ ಆಸಕ್ತಿ ಇಲ್ಲ. ಕೇಂದ್ರ ಶೀಘ್ರವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದರೆ ಯೋಜನೆ ಅನುಷ್ಠಾನ ಸುಲಭ. ಕೇಂದ್ರ ಸರ್ಕಾರ ಗೋವಾ ಸರ್ಕಾರದೊಂದಿಗೆ ಸಮಾಲೋಚಿಸಿ, ಪರಿಸರ ಮತ್ತು ಅರಣ್ಯ ಸಂಬಂಧಿಸಿದ ತಕರಾರು ಪರಿಹರಿಸಿದರೆ ರಾಜ್ಯ ಸರ್ಕಾರ ತಕ್ಷಣ ಕ್ರಮ ವಹಿಸಲಿದೆ. ರಾಜ್ಯ ಸರ್ಕಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಹೇಳಿದರು.

ಬೆಣ್ಣೆಹಳ್ಳ ಯೋಜನೆ ಶೀಘ್ರ ಜಾರಿ

ಬೆಣ್ಣಿಹಳ್ಳ ಯೋಜನೆಯನ್ನು ಡಿಪಿಆರ್ ಮಾಡಿಸಿ, ಶೀಘ್ರವಾಗಿ ಜಾರಿಗೊಳಿಸಲಾಗುವುದು. ಇದರ ಜತೆಗ ತುಪ್ಪರಿ ಹಳ್ಳ ಯೋಜನೆಯನ್ನೂ ಕೈಗೆತ್ತಿಕೊಳ್ಳಲಾಗುತ್ತದೆ. ಧಾರವಾಡ ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ರೈತರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು .

ಗ್ಯಾರಂಟಿಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆ

ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರ್ಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗಿದೆ. ಪಂಚ ಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3.80 ಲಕ್ಷ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರ್ಕಾರ ಸಶಕ್ತವಾಗಿದೆ. ಯಾರಿಗೂ ಭಯಬೇಡ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ | G Parameshwar: ಶನೀಶ್ವರನ ಮಂತ್ರ ಹೇಳಿ ಭಾಷಣ ಆರಂಭಿಸಿದ ಗೃಹ ಸಚಿವ ಜಿ. ಪರಮೇಶ್ವರ್‌!

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಕೃಷಿ ವಿವಿ ಸಹ ಕುಲಾಧಿಪತಿ ಎನ್. ಚಲುವರಾಯಸ್ವಾಮಿ ಅವರು ಕೃಷಿ ವಿವಿಯ ವಿಶೇಷ ಪ್ರಕಟಣೆಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ನಂತರ ಶ್ರೇಷ್ಠ ಕೃಷಿ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆಯರಿಗೆ, ಪ್ರಗತಿಪರ ರೈತರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ವಿತರಿಸಿ, ಗೌರವಿಸಿದರು.

ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಬಸವರಾಜ ಶಿವಣ್ಣನವರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ, ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿ.ಪಂ. ಸಿಇಒ ಸ್ವರೂಪ. ಟಿ.ಕೆ., ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಇದ್ದರು.

Exit mobile version