ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka CM) ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ (Siddaramaiah) ಅವರ ಕಾರ್ಯ ನಿರ್ವಹಣೆಗೆ ಅನುಕೂಲವಾಗುವಂತೆ ತಂಡಕ್ಕೆ ಹೊಸ ನೇಮಕಾತಿಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (Additiona Chief secretary), ಮಾಧ್ಯಮ ಸಲಹೆಗಾರರು (Media advisor), ವಿಶೇಷ ಅಧಿಕಾರಿ (Special officer) ಸೇರಿದಂತೆ ಹಲವು ನೇಮಕಗಳನ್ನು ಪ್ರಕಡಿಸಲಾಗಿದೆ.
ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್
ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ಟಿ.ವಿ ಸುನಂದಮ್ಮ ಆದೇಶ ಹೊರಡಿಸಿದ್ದಾರೆ. ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಸೂಚಿಸಲಾಗಿದೆ. ಕೆ.ವಿ. ಪ್ರಭಾಕರ್ ಅವರು 2014ರಿಂದಲೂ ಸಿದ್ದರಾಮಯ್ಯ ಅವರ ಬಳಿ ಮಾಧ್ಯಮ ನಿರ್ವಹಣೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೆ ವಿ ಪ್ರಭಾಕರ್ ಅವರು ವಿಜಯ ಕರ್ನಾಟಕ, ಕನ್ನಡಪ್ರಭ ಮುಂತಾದ ಪತ್ರಿಕೆಗಳಲ್ಲಿ ರಾಜಕೀಯ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್
ಗೃಹ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ 1986ರ ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿಯಾಗಿರುವ ಡಾ. ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ಜೇಮ್ಸ್ ತಾರಕನ್ ಅವರು ರಾಜ್ಯಪಾಲರ ಪರವಾಗಿ ಈ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್
ಬೆಂಗಳೂರಿನ ಚಂದ್ರಾ ಲೇಔಟ್ ನಿವಾಸಿಯಾಗಿರುವ ಎಂ. ವೆಂಕಟೇಶ್ ಅವರನ್ನು ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ಕೆ.ವಿ. ಅಶೋಕ ಅವರು ಆದೇಶ ಹೊರಡಿಸಿದ್ದಾರೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ಮಾಡಲಾಗಿದ್ದು, ಸಿದ್ದರಾಮಯ್ಯ ಅವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿವರೆಗೆ ಈ ಹುದ್ದೆಯಲ್ಲಿ ಇರುತ್ತಾರೆ ಎಂದು ತಿಳಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ತಿಳಿಸಲಾಗಿದೆ. ಇವರು ಈ ಹಿಂದೆಯೂ ಸಿದ್ದರಾಮಯ್ಯ ಅವರ ಜತೆಗೇ ಕೆಲಸ ಮಾಡುತ್ತಿದ್ದರು.
ಆಪ್ತ ಕಾರ್ಯದರ್ಶಿಯಾಗಿ ಡಾ. ವೆಂಕಟೇಶಯ್ಯ
ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಡಾ. ವೆಂಕಟೇಶಯ್ಯ ಅವರನ್ನು ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ಉಮಾದೇವಿಯವರು ಆದೇಶಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಮೇ 20ರಿಂದಲೇ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಇವರು ಕೂಡ ಹಿಂದಿನಿಂದಲೂ ಸಿದ್ದರಾಮಯ್ಯ ಅವರ ಜತೆ ಕೆಲಸ ಮಾಡುತ್ತಿದ್ದಾರೆ.
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಬಿ. ಶಿವಸ್ವಾಮಿ
ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಬಿ. ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರು ಪೌರಾಡಳಿತ ನಿರ್ದೇಶನಾಲಯದ ಆಡಳಿತ ವಿಭಾಗದ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿರುವ ಉಮಾದೇವಿಯವರು ಆದೇಶಿಸಿದ್ದಾರೆ.
ಇದನ್ನೂ ಓದಿ : Siddaramaiah: ಹಾರ-ತುರಾಯಿ ಸನ್ಮಾನ ಬೇಡ, ಪುಸ್ತಕ ನೀಡಿ ಎಂದ ಸಿದ್ದರಾಮಯ್ಯ; ಸಿಎಂ ಸರಳತೆಗೆ ಎಲ್ಲೆಡೆ ಮೆಚ್ಚುಗೆ