Site icon Vistara News

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

land fraud

ಬೆಂಗಳೂರು: ಜಮೀನು ಮಾರಾಟದಲ್ಲಿ ವಂಚನೆ (land fraud) ತಡೆಯಲು ಪಹಣಿ-ಆಧಾರ್‌ ಜೋಡಣೆ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ ಭೂ ಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ನಗರದ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಮಿ ಪಡೆಯಲು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಅಗತ್ಯತೆಯನ್ನು ವಿವರಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿಗಳು ಸಹ ಈ ಅಗತ್ಯತೆಗಳಿಗೆ ತಕ್ಕಂತೆ ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್‌ ಬೀಟ್‌ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸೃಜಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಒಟ್ಟು 91,000 ಜಮೀನುಗಳು ಒತ್ತವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಆಗಸ್ಟ್‌ ತಿಂಗಳಿನಿಂದ ಸರ್ವೆಯರ್‌ಗಳ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು. ಇತರ ಇಲಾಖೆಯವರೂ ತಮ್ಮ ಜಮೀನು ಎಲ್ಲಿದೆ ಹಾಗೂ ಒತ್ತುವರಿಯಾಗಿದೆಯೇ ಎಂಬ ಕುರಿತು ಪರಿಶೀಲಿಸಲು ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಈ ವೇಳೆ ಸಿಎಂ ಪ್ರತಿಕ್ರಿಯಿಸಿ, ವಿವಿಧ ಇಲಾಖೆಗಳ ಆಸ್ತಿ ರಕ್ಷಣೆಗೆ ಎಸ್ಟೇಟ್‌ ಅಧಿಕಾರಿಗಳನ್ನು ನೇಮಕ ಮಾಡಬೇಕು. ತಮ್ಮ ಇಲಾಖೆಗೆ ಹಂಚಿಕೆಯಾದ ಭೂಮಿಯ ಮಾಹಿತಿಯನ್ನು ಆರ್.ಟಿ.ಸಿ.ಯಲ್ಲಿ ಇಂದೀಕರಣ ಮಾಡಬೇಕು. ಹಾಗೂ ಒತ್ತುವರಿ ತೆರವುಗೊಳಿಸಿ, ತಮ್ಮ ಆಸ್ತಿಯನ್ನು ಸಂರಕ್ಷಿಸಬೇಕು. ಸರ್ಕಾರಿ ಜಮೀನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದು ಸೂಚಿಸಿದರು.

737 ಸರ್ವೆಯರ್‌ ಹುದ್ದೆಗಳ ನೇಮಕಕ್ಕೆ ಶೀಘ್ರ ಕ್ರಮ

ಪೋಡಿ ಮತ್ತು ದುರುಸ್ತಿ ಪ್ರಕರಣಗಳು ಬಹಳ ಸಂಖ್ಯೆಯಲ್ಲಿ ಬಾಕಿ ಇರುವುದರಿಂದ, ಅಭಿಯಾನ ಮಾದರಿಯಲ್ಲಿ ಪೂರ್ಣಗೊಳಿಸಬೇಕು. ಇದಕ್ಕೆ ಹೆಚ್ಚುವರಿ ಸರ್ವೆಯರ್‌ಗಳ ಅಗತ್ಯವಿದೆ. 737 ಹುದ್ದೆಗಳಿಗೆ ಅನುಮತಿ ದೊರೆತಿದ್ದು, ಶೀಘ್ರವೇ ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ, ಇಂಡೆಕ್ಸ್‌ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ 3.28 ಕೋಟಿ ಪುಟಗಳನ್ನು ಸ್ಕ್ಯಾನ್‌ ಮಾಡಲಾಗಿದೆ. 31 ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಆಗಸ್ಟ್‌ನಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಕೈಗೊಳ್ಳಲಾಗುವುದು. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.

ಇಂಧನ ಇಲಾಖೆ

ಇಂಧನ ಇಲಾಖೆಯಲ್ಲಿ ಒಟ್ಟು 217 ಪ್ರಕರಣಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಜಮೀನು ಅಗತ್ಯವಿದ್ದು, ಜಿಲ್ಲಾಧಿಕಾರಿಗಳು ಜಮೀನು ಗುರುತಿಸಿ ಹಸ್ತಾಂತರಿಸಬೇಕು. ಸೌರ ಘಟಕಗಳನ್ನು ಅನುಷ್ಠಾನಗೊಳಿಸುವ ಪಿಎಂ ಕುಸುಮ್‌ ಯೋಜನೆಯಡಿ 170 ಕಾಮಗಾರಿಗಳಿಗೆ ಜಮೀನು ಒದಗಿಸಬೇಕಾಗಿದೆ. ಇದೇ ರೀತಿ ಕೆಪಿಸಿಎಲ್‌ 45 ಉಪ ಕೇಂದ್ರಗಳಿಗೆ ಜಮೀನು ಹಾಗೂ ಶರಾವತಿ ಕಣಿವೆಯಲ್ಲಿ 2ಸಾವಿರ ಮೆಗಾ ವ್ಯಾಟ್‌ ಸಾಮರ್ಥ್ಯದ ಪಂಪ್ಡ್‌ ಸ್ಟೋರೇಜ್‌ ವಿದ್ಯುತ್‌ ಯೋಜನೆ ಅನುಷ್ಟಾನಕ್ಕೆ 40 ಎಕ್ರೆ ಖಾಸಗಿ ಭೂಮಿಯನ್ನು ಭೂಸ್ವಾಧೀನ ಪಡಿಸಬೇಕಾಗಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ | Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು 4500 ಅರ್ಜಿ ಬಾಕಿಯಿದೆ. ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದು. ಎಲ್ಲಾ ಫಲಾನುಭವಿ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

Exit mobile version