ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವವೂ ಆರಂಭವಾಗಿದೆ. ರಾಜಕೀಯ ನಾಯಕರು, ಅವರ ಕಟ್ಟಾ ಅನುಯಾಯಿಗಳು ಪಕ್ಷ ತೊರೆಯುವ ಪ್ರಕ್ರಿಯೆಗಳೂ ಹೆಚ್ಚಾಗುತ್ತಿವೆ. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ (CT Ravi) ಆಪ್ತ, ಲಿಂಗಾಯತ ಮುಖಂಡ ಎಚ್.ಡಿ. ತಮ್ಮಯ್ಯ (H.D. Thammaiah) ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇದು ಸಿ.ಟಿ. ರವಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಎಚ್.ಡಿ. ತಮ್ಮಯ್ಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿ ಸಿ.ಟಿ. ರವಿ ಇದ್ದರೂ ಇವರು ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಆದರೆ, ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಇವರು ಬೇಸರಗೊಂಡಿದ್ದರು.
ಇದನ್ನೂ ಓದಿ: Lexi Chatbot: ಭಾರತದ ಮೊದಲ ಚಾಟ್‌ಜಿಪಿಟಿ ಬೆಂಬಲಿತ ಚಾಟ್‌ಬಾಟ್ ಲೆಕ್ಸಿ! ಇದು ಹೇಗೆ ಕೆಲಸ ಮಾಡುತ್ತದೆ?
ಈಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ತಮ್ಮಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದು, ಈ ಸಮುದಾಯದ ಮುಖಂಡರೊಬ್ಬರು ಬಿಜೆಪಿ ತೊರೆದಿರುವುದು ಸಿ.ಟಿ. ರವಿ ಅವರಿಗೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಸಿ.ಟಿ. ರವಿ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.