ಬೆಂಗಳೂರು: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಗಳನ್ನು ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಆರಂಭಿಸುತ್ತಿದ್ದು, ಜುಲೈ 22ರಂದು ಸೋಮವಾರ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೂರ್ವ ಪ್ರಾಥಮಿಕ ಶಾಲೆಗಳಿಗೆ (LKG UKG in Anganwadis) ಚಾಲನೆ ನೀಡಲಿದ್ದಾರೆ.
ಗೋವಿಂದರಾಜನಗರದ ಪಟ್ಟೆಗಾರಪಾಳ್ಯ ಮುಖ್ಯರಸ್ತೆಯ ಕಾವೇರಿಪುರ 4ನೇ ಕ್ರಾಸ್‌ನ ಬಾಲಯ್ಯ ಪಾರ್ಕ್ ಎದುರು ಜುಲೈ 22ರಂದು ಮಧ್ಯಾಹ್ನ 12ಗಂಟೆಗೆ ಪೂರ್ವ ಪ್ರಾಥಮಿಕ ತರಗತಿಗೆ ಚಾಲನೆ ಕಾರ್ಯಕ್ರಮ ನಡೆಯಲಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಸರ್ಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ
ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ (LKG UKG in Anganwadis) ಮೊದಲ ಭಾಗವಾಗಿ ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.
ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.
30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ಹೇಳಿದ್ದರು.
ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!
ಈ ಮೊದಲು ಪ್ರಾಥಮಿಕ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.