Site icon Vistara News

Jobs for locals: ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಡ್ಡಾಯ: ಸಿಎಂ

CM Siddaramaiah

ಮೈಸೂರು: ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ತಾಂತ್ರಿಕ ನೈಪುಣ್ಯ ಇರುವವರು ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಇದರ ಹೊರತಾಗಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ (Jobs for locals) ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಹೀಗಾಗಿ ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು ಎಂದು ತಿಳಿಸಿದರು.

ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

ಇದನ್ನೂ ಓದಿ | Veerashaiva Lingayat: ಮರು ಜಾತಿಗಣತಿ ಮಾಡಿ; ಸರ್ಕಾರಕ್ಕೆ ವೀರಶೈವ ಮಹಾಸಭಾ ಒಕ್ಕೊರಲ ಆಗ್ರಹ

ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ವಿವಿಧೆಡೆ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣಗಳು (Toilet Cleaning) ಬೆಳಕಿಗೆ ಬರುತ್ತಿವೆ. ಕೋಲಾರದ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲಾ ಮಕ್ಕಳಿಂದ ಮಲ ಗುಂಡಿ ಸ್ವಚ್ಛತೆ ಪ್ರಕರಣದ ಬೆನ್ನಲ್ಲೇ ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಕಂಡುಬಂದಿದೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ. ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Congress Manifesto : ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ರಚನೆ; ಸಿದ್ದರಾಮಯ್ಯ ಸಹಿತ 16 ಮಂದಿಗೆ ಹೊಣೆ

ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Exit mobile version