ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಗೆಲುವು ಸಾಧಿಸಲು ಕರ್ನಾಟಕ ಬಿಜೆಪಿಯು (Karnataka BJP) ಇನ್ನಿಲ್ಲದ ರಣತಂತ್ರ ರೂಪಿಸುತ್ತಿದೆ. ಇದರ ಬೆನ್ನಲ್ಲೇ, ಬಿಜೆಪಿಗೆ ಬಂಡಾಯದ ಬಿಸಿಯೂ ತಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ (ST Somashekar) ಅವರು ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರಕ್ಕೆ ಇಳಿದಿದ್ದು, ಬಿಜೆಪಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಅವರ ಪರವಾಗಿ ಎಸ್.ಟಿ.ಸೋಮಶೇಖರ್ ಅವರು ಬಹಿರಂಗವಾಗಿಯೇ ಪ್ರಚಾರಕ್ಕಿಳಿದಿರುವುದು ಈಗ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ವಿನಾಶ ಕಾಲೇ ವಿಪರೀತ ಬುದ್ಧಿ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಬೆಂಗಳೂರಿನ ಕೆಂಗೇರಿಯ ಬಂಡೆ ಮಠದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಪಾಲ್ಗೊಂಡಿದ್ದಾರೆ. ಸಚಿವ ಕೃಷ್ಣ ಭೈರೇಗೌಡ, ಶಾಸಕ ಶ್ರೀನಿವಾಸ್ ಅವರಿದ್ದ ಸಭೆಯಲ್ಲಿ ಎಸ್.ಟಿ.ಸೋಮಶೇಖರ್ ಭಾಗಿಯಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಪರವಾಗಿ ಅವರು ಪ್ರಚಾರ ನಡೆಸಿದ್ದಾರೆ. ಅಲ್ಲದೆ, ಕಾರ್ಯಕರ್ತರ ಸಭೆಯನ್ನೂ ಕರೆದ ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ನೋಟಿಸ್ ಕೊಟ್ಟು ಸುಮ್ಮನಾದ ಬಿಜೆಪಿ
ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಪರ ಹೇಳಿಕೆ ನೀಡುವುದು, ಪ್ರಚಾರ ಮಾಡುವುದು ಸೇರಿ ಹಲವು ಚಟುವಟಿಕೆಗಳಲ್ಲಿ ತೊಡಗಿದರೂ ಬಿಜೆಪಿ ಮಾತ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದುವರೆಗೆ ಎಸ್.ಟಿ.ಸೋಮಶೇಖರ್ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿರುವುದು ಬಿಟ್ಟರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ಯಶವಂತಪುರ ಬಿಜೆಪಿ ಶಾಸಕ ಸೋಮಶೇಖರ್ ಅವರು ಬಹಿರಂಗವಾಗಿಯೇ ಕಾಂಗ್ರೆಸ್ ಪರ ಪ್ರಚಾರ ಕೈಗೊಂಡಿದ್ದು, ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸಲಿದೆ, ಕ್ರಮ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.
ವಿನಾಶ ಕಾಲ ಎಂದ ವಿಜಯೇಂದ್ರ
ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ “ವಿನಾಶ ಕಾಲೇ ವಿಪರೀತ ಬುದ್ಧಿ” ಎಂದು ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. “ರಾಜಕೀಯವಾಗಿ ಅವರು ತಪ್ಪು ನಿರ್ಧಾರ ಮಾಡಿದ್ದಾರೆ. ಇದರ ಬಗ್ಗೆ ಮುಂದೆ ನೋಡುತ್ತೀರಿ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಅಂತಹವರು ಇದ್ದಾಗ ಇಂತಹ ತಪ್ಪು ನಿರ್ಧಾರ ಮಾಡಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ: Lok Sabha Election 2024 : ಚಿಕ್ಕಬಳ್ಳಾಪುರ ಟಿಕೆಟ್ ಫೈಟ್; ಡಾ. ಸುಧಾಕರ್ ವಿರುದ್ಧ ವಿಶ್ವನಾಥ್ ಕೆಂಡಾಮಂಡಲ
ಅವರು ಬಿಜೆಪಿಯಲ್ಲಿಲ್ಲ ಎಂದ ಅಶೋಕ್
ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, “ಎಸ್.ಟಿ.ಸೋಮಶೇಖರ್ ಅವರು ಬಿಜೆಪಿಯಲ್ಲಿಲ್ಲ” ಎಂಬ ಅಚ್ಚರಿಯ ಹೇಳಿಕೆ ನೀಡಿದರು. “ಎಸ್.ಟಿ.ಸೋಮಶೇಖರ್ ಅವರು ಕಾಲು ಹೊರಗಿಟ್ಟಿದ್ದಾರೆ. ಕಾಂಗ್ರೆಸ್ ನಾಯಕರ ಜತೆ ಅವರು ಸಂಪರ್ಕದಲ್ಲಿದ್ದಾರೆ. ಚುನಾವಣೆ ಬಳಿಕ ಅವರ ವಿರುದ್ಧ ಬಿಜೆಪಿ ವರಿಷ್ಠರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದಷ್ಟೇ ಹೇಳಿದರು. ಅಂದಹಾಗೆ, ರಾಜ್ಯಸಭೆ ಚುನಾವಣೆಯಲ್ಲೂ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡಿದ್ದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ