Site icon Vistara News

Lok Sabha Election 2024: ಇಂದು ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಅನುಮಾನ; ಮಂಗಳವಾರವೇ ಕಾರಣ?

Lok Sabha Election 2024

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನಿಂದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, ಪಟ್ಟಿ ಬಿಡುಗಡೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ಜೆಡಿಎಸ್ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿತ್ತು. ಆದರೆ, ಮಂಗಳವಾರ ಆಗಿರುವುದರಿಂದ ಪಟ್ಟಿ ರಿಲೀಸ್ ಅನುಮಾನ ಎನ್ನಲಾಗಿದ್ದು, ಬಹುತೇಕ ನಾಳೆ (ಮಾ.27) ಪಟ್ಟಿ ಘೋಷಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೇವೇಗೌಡರು ಹಾಸನದಿಂದ ವಾಪಸ್ ಆದ ಬಳಿಕ ಬುಧವಾರ ಅವರೊಂದಿಗೆ ಎಚ್‌.ಡಿ. ಕುಮಾರಸ್ವಾಮಿ ಅವರು ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಕೋಲಾರದಲ್ಲಿ ಮಲ್ಲೇಶ್‌ ಬಾಬುಗೆ ಟಿಕೆಟ್‌ ನೀಡಲಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಮೂರು ಕ್ಷೇತ್ರಗಳಿಗೆ ಟಿಕೆಟ್‌ ಅಂತಿಮಗೊಳಿಸಲಾಗಿದೆ.

ಮಂಡ್ಯ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಈ ಬಾರಿ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಹಾಸನದಲ್ಲಿ ಹಾಲಿ ಸಚಿವ ಪ್ರಜ್ವಲ್‌ ರೇವಣ್ಣ ಅವರೇ ಮತ್ತೊಮ್ಮೆ ಸ್ಪರ್ಧಿಸುತ್ತಿದ್ದಾರೆ. ಇನ್ನು ಕೋಲಾರ ಕ್ಷೇತ್ರದಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ, ಬಂಗಾರಪೇಟೆ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಈ ಪೈಕಿ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ಪಕ್ಷ ಮಣೆ ಹಾಕಿದೆ.

ಪಕ್ಷದ ಉಳಿವಿಗಾಗಿ ನನ್ನ ತೀರ್ಮಾನ: ಎಚ್‌.ಡಿ. ಕುಮಾರಸ್ವಾಮಿ

Lok Sabha Election 2024 HD Kumaraswamy says he contest from Mandya Lok Sabha constituency

ಜೆಡಿಎಸ್‌ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನಾನು ಮಂಡ್ಯದಿಂದ ಅನಿವಾರ್ಯವಾಗಿ ಕಣಕ್ಕಿಳಿಯುವ ಬಗ್ಗೆ ಚನ್ನಪಟ್ಟಣ ಜನತೆಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಇದಕ್ಕೆ ಚನ್ನಪಟ್ಟಣ ಮುಖಂಡರು ಸಹಮತವನ್ನು ವ್ಯಕ್ತಪಡಿಸಿದ್ದಾರೆ. ನಾವು ಇವತ್ತು ನೆಲ‌ಕಚ್ಚಿದ್ದೇವೆ, ಮತ್ತೆ ಪುಟಿದೇಳಬೇಕು. ನಮ್ಮಲ್ಲಿ ಲೋಪದೋಷಗಳಿದ್ದು, ಅದನ್ನು ಸರಿಪಡಿಸಿಕೊಳ್ಳುತ್ತೇವೆ. ನನ್ನ ಪಕ್ಷದ ಭವಿಷ್ಯ, ಪಕ್ಷದ ಹೃದಯ ಭಾಗ ಮಂಡ್ಯದ ಜನರ ಅಪೇಕ್ಷೆಯಂತೆ ಪಕ್ಷವನ್ನು ಗಟ್ಟಿಗೊಳಿಸಲು ಈ ತೀರ್ಮಾನ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ ಬಳಿಕ ತಮ್ಮ ಸ್ಪರ್ಧೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದೇನೆ ಎಂದು ಹೇಳಿದರು.

ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂಬ ಗುರಿಯನ್ನು ಹಾಕಿಕೊಂಡಿದ್ದೇವೆ. ಮಂಡ್ಯ ಜಿಲ್ಲೆಯ ಕಾರ್ಯಕರ್ತರ ತೀರ್ಮಾನಕ್ಕೆ ಗೌರವ ಕೊಡುವುದು ನಮ್ಮ ಕರ್ತವ್ಯವಾಗಿದೆ. ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಾಯ ಮಾಡಲಾಗಿತ್ತು. ಆದರೆ, ಅವರು ಸ್ಪರ್ಧೆಗೆ ನಿರಾಕರಿಸಿದ್ದಾರೆ. ನಾನು ಈಗಾಗಲೇ ನೋವು ತಿಂದಿದ್ದೇನೆ. ಹೀಗಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನನಗೆ ಸಿ.ಎಸ್. ಪುಟ್ಟರಾಜು ಅಥವಾ ನಿಖಿಲ್‌ರನ್ನು ಕಣಕ್ಕಿಳಿಸಬೇಕು ಎಂಬ ಆಸೆ ಇತ್ತು. ಆದರೆ, ಅವರು ಅವರು ಸ್ಪರ್ಧೆ ಸಾಧ್ಯವಿಲ್ಲ ಎಂದು ಕಠಿಣ ನಿರ್ಣಯ ಮಾಡಿಕೊಂಡಿದ್ದಾರೆ. ಆ ಜಿಲ್ಲೆಯ ಜನರ ಋಣವನ್ನು ತೀರಿಸಬೇಕು. ಇಡಿ ನಾಡೇ ನನ್ನ ಕರ್ಮ ಭೂಮಿಯಾಗಿದೆ. ಹಾಗಂತ ರಾಮನಗರ ಬಿಟ್ಟು ನಾನು ಹೋಗುವುದಿಲ್ಲ. ಈ ಪಕ್ಷದ ಉಳಿವಿಗಾಗಿ ಒಂದು ತೀರ್ಮಾನವನ್ನು ಕೈಗೊಳ್ಳಬೇಕಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ | Lok Sabha Election 2024: ಆಪರೇಷನ್‌ ದಾವಣಗೆರೆ ಬಿಜೆಪಿ ಸಕ್ಸಸ್‌; ರವೀಂದ್ರನಾಥ್‌ಗೆ ಚುನಾವಣೆ ಹೊಣೆ, ಬಂಡಾಯ ಶಮನ

ಕೋರ್‌ ಕಮಿಟಿ ಸಭೆಯಲ್ಲಿ ಹಲವು ವಿಚಾರಗಳ ಚರ್ಚೆ

ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ (JDS core committee meeting) ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದರು. ತಮಿಳುನಾಡಿನ ಡಿಎಂಕೆ ಸರ್ಕಾರ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪವನ್ನು ಮಾಡಿದ್ದರ ಬಗ್ಗೆ ಚರ್ಚೆ ನಡೆಸಲಾಗಿದೆ. ಜೆಡಿಎಸ್‌ನಿಂದ ಪ್ರಣಾಳಿಕೆಯನ್ನು ಮಾಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡಿದ್ದಾರೆ. ಆ ಕುರಿತು ಚರ್ಚೆ ಆಗಿದೆ. ಕೆಲವು ಸೂಕ್ಷ್ಮ ವಿಚಾರಗಳು ಇವೆ. ಎನ್‌ಡಿಎ ಸರ್ಕಾರ ಇದೆ ಎಂಬುದು ನಮ್ಮ ವಿಶ್ವಾಸವಾಗಿದೆ. ಕೋಲಾರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಅಲ್ಲದೆ, ಶಾಸಕರ ಎಲ್ಲರ ಒಳಗೊಂಡ ಸಮನ್ವಯ ಸಮಿತಿಯನ್ನು ಪ್ರಕಟ ಮಾಡಿದ್ದೇವೆ. 2024ರ ಚುನಾವಣೆಯನ್ನು ಯಾವ ರೀತಿ ನಡೆಸಬೇಕು ಎಂಬುದರ ಬಗ್ಗೆ ಪಕ್ಷದ ಮುಖಂಡರಿಗೆ ಹೇಳಿದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದರು. ಅಲ್ಲದೆ, ಹಾಸನ ಲೋಕಸಭಾ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ನಿರ್ಧಾರ ಮಾಡಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Exit mobile version