ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ಬಿಜೆಪಿಯಿಂದ ಕರ್ನಾಟಕದ (BJP Karnataka) 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಇನ್ನೈದು ಕಡೆ ಘೋಷಣೆ ಬಾಕಿ ಇದೆ. ಅಲ್ಲದೆ, ಜೆಡಿಎಸ್‌ಗೆ (JDS Karnataka) ಮೂರು ಕ್ಷೇತ್ರವನ್ನು ಬಿಟ್ಟು ಕೊಡಲಾಗಿದೆ ಎಂದೇ ಹೇಳಲಾಗುತ್ತಿತ್ತು. ಈ ಬಗ್ಗೆ ಸ್ವತಃ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರೂ ಸ್ಪಷ್ಟಪಡಿಸಿದ್ದರು. ಆದರೆ, ಈಗ ನಡೆದಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಕೋಲಾರ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಲಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಲ್ಲದೆ, ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುಳಿವು ಸಿಕ್ಕಿದೆ. ಈ ಬಾರಿ ಅರವಿಂದ್ ಲಿಂಬಾವಳಿ (Aravind Limbavali) ಕಣಕ್ಕಿಳಿಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಾಳೆ (ಶನಿವಾರ – ಮಾರ್ಚ್ 16) ಚುನಾವಣಾ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ. ಕೊನೇ ಕ್ಷಣದಲ್ಲೂ ಎಲ್ಲ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿವೆ. ಇನ್ನೂ ಘೋಷಣೆಗೆ ಸಮಯ ಇದೆಯಾದರೂ ಅಭ್ಯರ್ಥಿಗಳು ಫೈನಲ್ ಆಗಿದ್ದೇ ಆದಲ್ಲಿ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯಗಳನ್ನು ಪ್ರಾರಂಭಿಸಬಹುದು. ಜತೆಗೆ ಕಾರ್ಯತಂತ್ರ ರೂಪಿಸಲು ಸಹಕಾರಿಯಾಗಲಿದೆ ಎಂಬ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಇದರ ಭಾಗವಾಗಿ ಈಗ ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್ ಕೈತಪ್ಪಲಿದ್ದು, ಬಿಜೆಪಿ ಪಾಲಾಗಲಿದೆ ಎಂದೇ ಹೇಳಲಾಗುತ್ತಿದೆ.
ಇದನ್ನೂ ಓದಿ: Vistara news polling booth: ಕೋಲಾರ ಲೋಕಸಭೆಯಲ್ಲಿ ಬಿಜೆಪಿಗೆ ಜೈ ಎಂದ ಮತದಾರ; 2ನೇ ಸ್ಥಾನದಲ್ಲಿ ಕಾಂಗ್ರೆಸ್!
ಮೈತ್ರಿ ಪಕ್ಷ ಜೆಡಿಎಸ್‌ಗೆ ಎರಡು ಸ್ಥಾನ?
ಈ ಬೆಳವಣಿಗೆಯಿಂದ ಈಗ ಬಿಜೆಪಿಯ ಮೈತ್ರಿ ಪಕ್ಷ ಜೆಡಿಎಸ್‌ಗೆ ಎರಡು ಸ್ಥಾನ ಮಾತ್ರ ಫಿಕ್ಸ್ ಆಗಲಿದೆ. ಹಾಗಾಗಿ ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳು ಮಾತ್ರ ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.
ಇದೇ ಕಾರಣವೇ?
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರೇ ಇದ್ದಾರೆ. ಅಲ್ಲದೆ, ಜೆಡಿಎಸ್‌ನಿಂದ ಇನ್ನೂ ಅಭ್ಯರ್ಥಿಯನ್ನು ಫೈನಲ್ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Lok Sabha Election 2024: ಬಿಜೆಪಿಯಿಂದ ಇಂದು ಸಂಜೆ 2ನೇ ಪಟ್ಟಿ ಪ್ರಕಟ ಸಾಧ್ಯತೆ; 5 ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳಿವರು
ಅರವಿಂದ ಲಿಂಬಾವಳಿ ಕೋಲಾರ ಅಭ್ಯರ್ಥಿ?
ಕೋಲಾರದಿಂದ ಅಭ್ಯರ್ಥಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅಭ್ಯರ್ಥಿಯಾಗಲಿದ್ದಾರಾ ಎಂಬ ಚರ್ಚೆ ಈಗ ಹುಟ್ಟಿಕೊಂಡಿದೆ. ಕಳೆದ ಬಾರಿ ಮುನಿಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಅವರನ್ನು ಗೆಲ್ಲಿಸುವಲ್ಲಿ ಕಾರ್ಯತಂತ್ರ ರೂಪಿಸಿದ್ದು ಇದೇ ಲಿಂಬಾವಳಿಯಾಗಿದ್ದರು. ಹೀಗಾಗಿ ಈ ಬಾರಿ ಅರವಿಂದ್ ಲಿಂಬಾವಳಿ ಅವರನ್ನೇ ಕಣಕ್ಕಿಳಿಸಿದರೆ ಹೇಗೆ ಎಂಬ ಆಲೋಚನೆಯಲ್ಲಿ ಬಿಜೆಪಿ ಹೈಕಮಾಂಡ್ ಇದೆ ಎನ್ನಲಾಗಿದೆ. ಹೇಗೂ ಕೋಲಾರವು “ಮೀಸಲು” ಕ್ಷೇತ್ರವಾಗಿರುವುದರಿಂದ ಲಿಂಬಾವಳಿಗೆ ಟಿಕೆಟ್ ಕೊಡುವ ಚಿಂತನೆಯಲ್ಲಿ ಬಿಜೆಪಿ ಇದೆ ಎಂದು ಹೇಳಲಾಗುತ್ತಿದೆ.