Site icon Vistara News

Lok Sabha Election 2024: ಸಿದ್ದರಾಮಯ್ಯ ಗರ್ವಭಂಗ ಆಗಬೇಕು; ಸಿಎಂ ವಿರುದ್ಧ ಗುಡುಗಿದ ಎಚ್.ಡಿ.ದೇವೇಗೌಡರು

Lok Sabha Election 2024

ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಆಗಬೇಕು ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಗುಡುಗಿದರು.

ನಗರದಲ್ಲಿ ನಡೆದ ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು ಎಂದು ಮಾಜಿ ಪ್ರಧಾನಿಗಳು ಜಿ.ಟಿ.ದೇವೇಗೌಡರಿಗೆ ಹೇಳಿದರು.

ಇದನ್ನೂ ಓದಿ | Parliament Flashback: ದೇಶದಲ್ಲಿ ಇಂದಿರಾ ಗಾಂಧಿ ವಿರೋಧಿ ಅಲೆ ಇದ್ದಾಗಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಭೇರಿ!

ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು ಎಂದು ದೇವೇಗೌಡರು ಕಿಡಿಕಾರಿದರು.

ಮನಮೋಹನ್ ಸಿಂಗ್ NO ಎಂದರು

ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು NO ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವವನಲ್ಲ. ಆ ಭಯ ಅನ್ನೋದೇ ನನಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು, ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್‌ನವರು ಏನು ಮಾಡಿದರು ಎನ್ನುವುದು ಗೊತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಮಾಜಿ ಪ್ರಧಾನಿಗಳು, 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್‌ನವರು ಹಣ ಸರಬರಾಜು ಮಾಡ್ತಿದ್ದಾರೆ. ರಾಜಸ್ಥಾನ, ತೆಲಂಗಾಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನು ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದರು.

ಇದನ್ನೂ ಓದಿ | Lok Sabha Election 2024: ಟಿಕೆಟ್‌ ಕೈ ತಪ್ಪಿದವರೂ ಈಗ ಬಿಜೆಪಿಯ ಸ್ಟಾರ್‌ ಪ್ರಚಾರಕರು; ಮೋದಿ ಸೇರಿ ಯಾರೆಲ್ಲಾ ಇದ್ದಾರೆ?

ಮೈತ್ರಿಯಿಂದ ಕಾಂಗ್ರೆಸ್‌ಗೆ ನಡುಕ ಉಂಟಾಗಿದೆ; ನಾವು ಎಲ್ಲಿಯೂ ಮೈ ಮರೆಯಬಾರದು ಎಂದ ಎಚ್‌ಡಿಕೆ

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಬಂದಿದೆ. ನಾವೂ ಎಲ್ಲಿಯೂ ಮೈ ಮರೆಯೋದು ಬೇಡ. ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಮತ್ತೆ ಬರುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು.

ಪ್ರತಿಷ್ಠೆಗೆ ಬೀಳುವುದು ಬೇಡ

ಕಾಂಗ್ರೆಸ್‌ನವರಿಗೆ ಮೈತ್ರಿಯ ಬಗ್ಗೆ ನಡುಕ ಉಂಟಾಗಿದೆ. ಇಡೀ ರಾಜ್ಯದ ಜನ ನಮ್ಮ ಮೈತ್ರಿಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಎಲ್ಲರೂ ಭಾವಿಸಿದ್ದಾರೆ. ಹೀಗಾಗಿ ನಮ್ಮಲ್ಲಿನ‌ ವಿಶ್ವಾಸಕ್ಕೆ ಕಿಂಚಿತ್ತೂ ವ್ಯತ್ಯಾಸ ಬರಬಾರದು. ಏನೇ ಸಮಸ್ಯೆ ಇದ್ದರೂ, ನಮ್ಮ ಗಮನಕ್ಕೆ ತನ್ನಿ. ಯಾರೂ ವೈಯಕ್ತಿಕ ಪ್ರತಿಷ್ಠೆಗೆ ಬೀಳುವುದು ಬೇಡ. ನಮ್ಮ ಮನಸ್ಸು ಶುದ್ದ, ಮೈತ್ರಿಯು ಈ ಚುನಾವಣೆಗೆ ಮಾತ್ರವಲ್ಲ, ಇದು ಮುಂದೆಯೂ ಮುಂದುವರಿಸಿಕೊಂಡು ಹೋಗಬೇಕು. ಈ ಮೈತ್ರಿ ನಾವು ಅಧಿಕಾರಕ್ಕಾಗಿ ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಿ ಹೇಳಿದರು.

ನಾನು, ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡಿದ್ದೇವೆ

2006ರಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆದಾಗ ದೇಶಕ್ಕೆ ಮಾದರಿಯಾಗುವ ಸರ್ಕಾರ ಮಾಡಿದ್ದೇವೆ. ನಾನು ಮುಖಸ್ತುತಿಗೆ ಈ ಮಾತು ಹೇಳುತ್ತಿಲ್ಲ, ಹಿರಿಯರಾದ ಯಡಿಯೂರಪ್ಪ ಮತ್ತು ನಾನು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿದ್ದೇವೆ. ಆ 20 ತಿಂಗಳುಗಳ ಆಡಳಿತ ಜನರ ಮನಸ್ಸಿನಲ್ಲಿ ಈಗಲೂ ಇದೆ. ಈ ಲೋಕಸಭೆ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಪಡೆಯುವ ಮೂಲಕ ಅಂತಹ ಮಾದರಿ ಸರ್ಕಾರ ತರಲು ನಾವೆಲ್ಲರೂ ಪ್ರಯತ್ನ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಂದು ಇಂದು ಬಿಜೆಪಿಯ ಅನೇಕ ನಾಯಕರು ನನ್ನ ಮೇಲೆ ಅಪಾರವಾದ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ. ಮೈತ್ರಿ ಸಂದರ್ಭದಲ್ಲಿ ದೇವೇಗೌಡರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದರಿಂದ ಸಮಸ್ಯೆಗಳು ಆದವು. ಆಗಲೇ ನನಗೆ ಬಿಜೆಪಿಯ ಜತೆ ದೀರ್ಘಾವಧಿ ಮೈತ್ರಿಯ ಉದ್ದೇಶ ಇತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗದಿರುವ ಬಗ್ಗೆ ನನಗೆ ಬೇಸರವಿದೆ ಎಂದು ಹೇಳಿದರು.

2018ರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗಬೇಕಿತ್ತು. ಆಗ ಮೈತ್ರಿ ಆಗಿದ್ದಿದ್ದರೆ ಬಹುಶಃ ಇಂದಿಗೂ ರಾಜ್ಯದಲ್ಲಿ ನಮ್ಮ ಮೈತ್ರಿ ಸರ್ಕಾರವೇ ಇರುತ್ತಿತ್ತು. ವಿಧಿಯಾಟ, ಆವತ್ತು ಏನೋ ನಡೆದು ಹೋಗಿದೆ ಎಂದು ಕುಮಾರಸ್ವಾಮಿ ಅವರು ನುಡಿದರು.

ಕಾಂಗ್ರೆಸ್ ಸುಳ್ಳು ಹೇಳುತ್ತಿದೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ. ಅದನ್ನೇ ನಾವು ಜನರ ಮನಸ್ಸಿಗೆ ಮುಟ್ಟುವಂತೆ ಹೇಳಬೇಕು. ನಿತ್ಯವೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಗ್ಯಾರಂಟಿಗಳನ್ನು ಕೊಟ್ಟು ಏನೋ ಸಾಧನೆ ಮಾಡಿದ್ದೇವೆ ಅಂತಾರೆ. ಐದು ವರ್ಷಗಳಲ್ಲಿ ಯಾವ ರಾಜ್ಯಕ್ಕೆ ಎಷ್ಟು ಹಣ ಹಂಚಿಕೆ ಮಾಡಬೇಕು ಎಂದು ಹಣಕಾಸು ಆಯೋಗ ತೀರ್ಮಾನ ಮಾಡಿರುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದರು.

ನುಡಿದಂತೆ ನಡೆದಿದ್ದೇವೆ ಎಂದು ಪ್ರತಿನಿತ್ಯವೂ ಪುಟಗಟ್ಟಲೆ ಜಾಹೀರಾತು ಕೊಡುತ್ತಿದ್ದಾರೆ. ಜನರು ಬರಗಾಲದಿಂದ ತತ್ತರಿಸಿದ್ದರೆ ಇವರು ಸಪ್ಲಿಮೆಂಟರಿ ಬಜೆಟ್‌ನಲ್ಲಿ ಪ್ರಚಾರಕ್ಕೆಂದು 200 ಕೋಟಿ ರೂಪಾಯಿ ಅನುದಾನಕ್ಕೆ ಒಪ್ಪಿಗೆ ಕೊಟ್ಟು ಕೊಂಡಿದ್ದಾರೆ. ಇದರ ಬಗ್ಗೆ ನಾವು ಜನರಿಗೆ ತಿಳಿಸಬೇಕು. ನಿಮ್ಮ ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆಂದು ಜನರಿಗೇ ಹೇಳಬೇಕು. ಹಿಂದೆ ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಪಾದಯಾತ್ರೆ ಮಾಡಿದ್ದರು. ಮೇಕೆದಾಟು ಪಾದಯಾತ್ರೆಯೂ ಆಯಿತು. ಸಿದ್ದರಾಮಯ್ಯನವರು ಆ ಯೋಜನೆಗಳಿಗೆ ಎಷ್ಟು ಹಣ ಕೊಟ್ಟರು? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕನ್ನಡಿಗರಿಗೆ ಅನ್ಯಾಯ ಅಂತಾರೆ, ಪಾಪ ನಿನ್ನೆ ಕಾಂಗ್ರೆಸ್ ಬಾವುಟ ಬಿಟ್ಟು ತಲೆಗೆಲ್ಲ ಕನ್ನಡ ಬಾವುಟ ಕಟ್ಟಿಕೊಂಡು ಹೋಗಿದ್ದನ್ನು ನೋಡಿದ್ದೇವೆ. ಕನ್ನಡಕ್ಕೆ ನಿರಂತರವಾಗಿ ಅನ್ಯಾಯ ಮಾಡಿದ ಇವರಿಗೆ, ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದ ಇವರಿಗೆ ಕನ್ನಡತನ ಎನ್ನುವುದು ಈಗ ನೆನಪಾಗಿದೆ ಎಂದು ಯಾರನ್ನು ಹೆಸರನ್ನು ಹೇಳದೆಯೇ ಕಾಂಗ್ರೆಸ್ ನಾಯಕರನ್ನು ಮಾಜಿ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ | Lok Sabha Election 2024: ಜೆಡಿಎಸ್ ಪಟ್ಟಿ ಬಿಡುಗಡೆ; ಮಂಡ್ಯದಿಂದ ಎಚ್‌ಡಿಕೆ, ಕೋಲಾರ, ಹಾಸನಕ್ಕೆ ಯಾರು?

ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಎರಡೂ ಪಕ್ಷಗಳ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಹಾಜರಿದ್ದರು.

Exit mobile version