Site icon Vistara News

Lok Sabha Election 2024: ಕಾಂಗ್ರೆಸ್‌, ಬಿಜೆಪಿಯಲ್ಲಿ ಮೂವರು ಮಾಜಿ ಸಿಎಂಗಳು ಅತಂತ್ರ! ಯಾರಿವರು?

Lok Sabha Election 2024 Three ex CMs who are unstable in Congress and BJP

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದೆ. ಈಗಾಗಲೇ ಚುನಾವಣೆ ಮತ್ತು ಫಲಿತಾಂಶದ ದಿನಾಂಕವನ್ನು ಚುನಾವಣಾ ಆಯೋಗವು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿದೆ. ಈಗಾಗಲೇ ಕರ್ನಾಟಕದ ಮಟ್ಟಿಗೆ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದೆ. ಆದರೆ, ಉಳಿಕೆ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಇದೆ. ಈ ನಡುವೆ ಬಿಜೆಪಿ (BJP Karnataka) ಮತ್ತು ಕಾಂಗ್ರೆಸ್‌ನಲ್ಲಿ (Congress Karnataka) ಒಟ್ಟು ಮೂವರು ಮಾಜಿ ಮುಖ್ಯಮಂತ್ರಿಗಳು ಅತಂತ್ರರಾಗಿದ್ದಾರೆ. ಒಬ್ಬರಿಗೆ ಟಿಕೆಟ್‌ ನಿರಾಕರಣೆ ಮಾಡಿದ್ದರೆ, ಮತ್ತಿಬ್ಬರಿಗೆ ಬಯಸಿದ ಕ್ಷೇತ್ರದಲ್ಲಿ ಟಿಕೆಟ್‌ ಸಿಗುತ್ತಿಲ್ಲ.

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ, ಚಿಕ್ಕಬಳ್ಳಾಪುರ ಕ್ಷೇತ್ರದ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ಈ ಬಾರಿ ಅದೇ ಕ್ಷೇತ್ರದಿಂದ ಪಕ್ಷದ ಟಿಕೆಟ್‌ ಬಯಸಿದ್ದಾರೆ. ಈ ಸಂಬಂಧ ಅವರು ಹೈಕಮಾಂಡ್ ಮಟ್ಟದಲ್ಲಿ ಲಾಬಿಯನ್ನೂ ಮಾಡುತ್ತಿದ್ದಾರೆ. ಆದರೆ, ಅವರಿಗೆ ಟಿಕೆಟ್‌ ಸಿಗುವುದು ಬಹುತೇಕ ಡೌಟ್‌ ಎಂದೇ ಹೇಳಲಾಗುತ್ತಿದೆ. ಅಲ್ಲಿಗೆ ಕಾಂಗ್ರೆಸ್‌ನಿಂದ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್‌ ನೀಡಲು ಕಾಂಗ್ರೆಸ್‌ ಉತ್ಸಾಹ ತೋರಿದೆ ಎನ್ನಲಾಗಿದೆ. ಹೀಗಾಗಿ ಮಾಜಿ ಸಿಎಂ ಮೊಯ್ಲಿ ತೀವ್ರ ನಿರಾಶರಾಗಿದ್ದಾರೆ ಎನ್ನಲಾಗಿದೆ. ಪಕ್ಷಕ್ಕಾಗಿ ದುಡಿದ ತಮಗೆ ಈ ಹೊತ್ತಿನಲ್ಲಿ ಕಡೆಗಣನೆ ಮಾಡಬಾರದು ಎಂದು ಅಲವತ್ತುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸದಾನಂದ ಗೌಡರ ನಿರ್ಧಾರ ಮಾ. 20ಕ್ಕೆ ಪ್ರಕಟ

ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಅವರು ಪ್ರಾರಂಭದಲ್ಲಿ ಚುನಾವಣಾ ನಿವೃತ್ತಿಯನ್ನು ಘೋಷಣೆ ಮಾಡಿದ್ದರು. ಹೀಗಾಗಿ ಅವರು ಸಂಸದರಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕಾಗಿ ಮತ್ತೆ ಟಿಕೆಟ್ ಪಡೆಯಲು ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್‌ ಮಟ್ಟದಲ್ಲಿ ಒತ್ತಡ ತರಲು ಪ್ರಯತ್ನ ಮಾಡಿದ್ದರು. ಆದರೆ, ಅದು ಫಲ ನೀಡಲಿಲ್ಲ. ಬಳಿಕ ಆ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಣೆ ಹಾಕಲಾಯಿತು. ಇದರಿಂದ ಅಸಮಾಧಾನಗೊಂಡಿರುವ ಸದಾನಂದ ಗೌಡ ಅವರನ್ನು ಈಗ ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿದ್ದಾರೆ. ಈಗ ಸದಾನಂದ ಗೌಡ ಅವರು ಕಾಂಗ್ರೆಸ್‌ನಿಂದ ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ನಾಳೆ (ಬುಧವಾರ – ಮಾ. 20) ಸುದ್ದಿಗೋಷ್ಠಿ ನಡೆಸಿ ನಿರ್ಧಾರವನ್ನು ಪ್ರಕಟ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

ಶೆಟ್ಟರ್‌ಗೂ ಅಸಮಾಧಾನ

ಇನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಘರ್ ವಾಪ್ಸಿ ಆದರೂ ಪ್ರಯೋಜನವಿಲ್ಲ ಎನ್ನುವಂತಾಗಿದೆ. ಘರ್ ವಾಪ್ಸಿ ಆಗುವ ಮೊದಲು ಅವರು ಕಾಂಗ್ರೆಸ್‌ನಲ್ಲಿ ದೊರೆತಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದರು. ಬಳಿಕ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ನಡುವೆ ಬೆಳಗಾವಿಯಲ್ಲಿ ಸ್ಪರ್ಧೆ ಮಾಡುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ಇದಕ್ಕೆ ಈಗಾಗಲೇ ಒಪ್ಪಿಸಲಾಗಿದೆ ಎಂದೂ ಹೇಳಲಾಗುತ್ತಿದೆ. ಆದರೆ, ಬೆಳಗಾವಿಯಲ್ಲಿ ಸ್ಪರ್ಧೆ ಮಾಡಲು ತಮಗೆ ಆಸಕ್ತಿ ಇಲ್ಲ ಎಂದು ಜಗದೀಶ್ ಶೆಟ್ಟರ್ ಹೇಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ನಿಂದ ವಾಪಸ್‌ ಬಂದ ಶೆಟ್ಟರ್‌ಗೆ ಬಿಜೆಪಿಯಲ್ಲಿ ಸ್ಥಾನಮಾನ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗುತ್ತಿದೆ.

Exit mobile version