ಬೆಂಗಳೂರು: ಲೋಕಾಯುಕ್ತಕ್ಕೆ ಪರ್ಯಾಯವಾಗಿ ರಚಿಸಲಾಗಿದ್ದ ಎಸಿಬಿ ವ್ಯವಸ್ಥೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿ, ಮತ್ತೆ ಲೋಕಾಯುಕ್ತಕ್ಕೆ ಜೀವ ನೀಡಿದ್ದರಿಂದ ಶುಕ್ರವಾರ ಲೋಕಾಯುಕ್ತವು ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದು, ಇನ್ನು ಸಾರ್ವಜನಿಕರು ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ದೂರು ಸಲ್ಲಿಸಬಹುದಾಗಿದೆ.
ಈ ಬಗ್ಗೆ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಪ್ರಕಟಣೆ ಹೊರಡಿಸಿದ್ದು, ಹೈಕೋರ್ಟ್ ನೀಡಿದ ಶಿಫಾರಸುಗಳು ಮತ್ತು ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಂದ ದೂರು ಸ್ವೀಕರಿಸಿ ಭ್ರಷ್ಟಾಚಾರ ತಡೆ ಕಾಯಿದೆ-1988ರ ಅನ್ವಯ ಪ್ರಕರಣ ದಾಖಲಿಸಿ ಕಾನೂನಿನಡಿ ತನಿಖೆ ನಡೆಸಬೇಕು ಎಂದು ಲೋಕಾಯುಕ್ತ ಎಸ್‌ಪಿ, ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ಲೋಕಾಯುಕ್ತ ಸ್ಥಾಪನೆ ಮಾಡಲಾಗಿತ್ತು. ಆದರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರ ಮಾರ್ಚ್ 14ರಂದು ಎಸಿಬಿ ರಚಿಸಿ ಆದೇಶ ಹೊರಡಿಸಿತ್ತು. ಆ ಬಳಿಕ ಭ್ರಷ್ಟಾಚಾರ ನಿಯಂತ್ರಣ ಮಾಡುವಲ್ಲಿ ಲೋಕಾಯುಕ್ತ ದುರ್ಬಲವಾಗಿತ್ತು. ಆದರೆ, ಇದರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೋರ್ಟ್‌ಗೆ ಸಲ್ಲಿಕೆಯಾಗಿದ್ದವು.
ಲೋಕಾಯುಕ್ತಕ್ಕೆ ಪರ್ಯಾಯವಾಗಿ ರಚಿಸಲಾಗಿದ್ದ ಎಸಿಬಿ ವ್ಯವಸ್ಥೆಯನ್ನು ಹೈಕೋರ್ಟ್ ಆ.೧೧ ರದ್ದುಗೊಳಿಸಿ ಮಹತ್ವದ ಆದೇಶವನ್ನು ನೀಡಿ, ಹಾಲಿ ಇರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸುವಂತೆ ಸೂಚನೆ ನೀಡಿತ್ತು.
ಇದನ್ನೂ ಓದಿ | ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್: ಸರಕಾರದ ವಿವೇಚನೆಗೆ ಬಿಟ್ಟದ್ದು ಎಂದ ಹೈಕೋರ್ಟ್