Site icon Vistara News

Death Penalty: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ; ಅಪರಾಧಿಗೆ ಮರಣ ದಂಡನೆ ಶಿಕ್ಷೆ

Death Penalty

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ ಶಿಕ್ಷೆ ಹಾಗೂ 1.5 ಲಕ್ಷ ರೂ.ದಂಡ ವಿಧಿಸಿ ಹಾವೇರಿ ಜಿಲ್ಲಾ ಅಧಿಕ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2019ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ನ್ಯಾಯಾಧೀಶ ನಿಂಗೌಡ ಪಾಟೀಲ್ ಅವರು ಮರಣ ದಂಡನೆ ಶಿಕ್ಷೆ ವಿಧಿಸಿದ್ದಾರೆ.

ಆರೋಪಿ ಶೆಟ್ಟಪ್ಪ ಬಸಪ್ಪ ವಡ್ಡರ್‌ ಮರಣ ದಂಡನೆ ಶಿಕ್ಷೆಗೊಳಗಾದ ಅಪರಾಧಿ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯ ಖುರ್ಸಾಪುರ ಗ್ರಾಮದಲ್ಲಿ 2019ರ ಮೇ 6ರಂದು ವಿವಾಹ ಸಮಾರಂಭಕ್ಕೆ ಕುಟುಂಬದ ಜತೆ 7 ವರ್ಷದ ಬಾಲಕಿ ಆಗಮಿಸಿದ್ದಳು. ಆಗ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದಾಗ ಆರೋಪಿ ಶೆಟ್ಟಪ್ಪ ಬಸಪ್ಪ ವಡ್ಡರ್‌ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಹಾಗೆಯೇ ಬಿಟ್ಟರೆ ಆ ವಿಷಯವನ್ನು ಬಹಿರಂಗ ಮಾಡಬಹುದು ಎಂದು ಬಾಲಕಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿಗ್ಗಾಂವಿ ವೃತ್ತದ ತನಿಖಾಧಿಕಾರಿ ಸಿಪಿಐ ಆರ್.ಎಫ್ ದೇಸಾಯಿ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದಲ್ಲಿ ಕುರಡಿಕೇರಿ ಗ್ರಾಮದ ಶೆಟ್ಟಪ್ಪ ಬಸಪ್ಪ ವಡ್ಡರ್‌ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗೌಡ ಪಾಟೀಲ್‌ ಅವರು, ಅಪರಾಧಿಗೆ ಮರಣ ದಂಡನೆ ಶಿಕ್ಷೆ ಮತ್ತು 1.5 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ | Mangalore News : ಟಾಯ್ಲೆಟ್‌ ರೂಂನಲ್ಲಿ ಸರ್ವಿಸ್‌ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಪಿಎಸ್‌ಐ!

ದಂಡದ ಹಣದಲ್ಲಿ ಮೃತ ಬಾಲಕಿಯ ಪಾಲಕರಿಗೆ 75 ಸಾವಿರ ರೂ. ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ರಾಜ್ಯ ಸರ್ಕಾರದಿಂದ ಮೃತ ಬಾಲಕಿಯ ಪಾಲಕರಿಗೆ ರೂ. 10 ಲಕ್ಷ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ್ ಅವರು ವಾದ ಮಂಡಿಸಿದ್ದರು.

Exit mobile version