ಕೊಪ್ಪಳ: ತನ್ನ ಆಸೆ ಈಡೇರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬಳಿಗೆ ಸೀಮೆ ಎಣ್ಣೆ ಸುರಿದು ಅಮಾನುಷವಾಗಿ ಕೊಂದಿದ್ದ ದುರಳನಿಗೆ ಜೀವಾವಧಿ ಶಿಕ್ಷೆಯಾಗಿದೆ.
ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಬಾಲಪ್ಪ ಎಂಬಾತನಿಗೆ ಜೀವಾವಧಿ ಶಿಕ್ಷೆಗೆ ಒಳಪಟ್ಟ ಅಪರಾಧಿ. ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಏನಿದು ಪ್ರಕರಣ?
2015ರ ಜುಲೈ 27ರಂದು ಆರೋಪಿ ಬಾಲಪ್ಪ ಸಂಗಾಪುರ ಗ್ರಾಮದ ವಿಧವೆ ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬಾಲಪ್ಪ ಪೀಡಿಸಿದ್ದಾನೆ. ಆದರೆ, ಆಕೆ ಮಾತ್ರ ಇದಕ್ಕೆ ಸುತಾರಾಂ ಒಪ್ಪಲಿಲ್ಲ. ತನ್ನ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಕುಪಿತಗೊಂಡ ಬಾಲಪ್ಪ ಸೀಮೆ ಎಣ್ಣೆ ಡಬ್ಬಿ ತಂದು ಮಹಿಳೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಆಗಿದ್ದ ಪ್ರಭಾಕರ ಧರ್ಮಟ್ಟಿ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣ ವಿಚಾರಣೆ ನಡೆಸಿದ ಗಂಗಾವತಿಯಲ್ಲಿರುವ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಅವರು ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿದೆ ಎಂದು ಪರಿಗಣಿಸಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ಎಸ್. ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ| ಹಾಡಹಗಲೇ ಯುವತಿ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ: ಆರೋಪಿ ಪೊಲೀಸ್ ವಶಕ್ಕೆ