ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದ ಮೇಲ್ಮನೆ ಚುನಾವಣೆಯಲ್ಲಿ ಎಚ್.ಕೆ.ರಾಮು ಅವರನ್ನು ಗೆಲ್ಲಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಬಲ ತುಂಬುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ಸಭಾ ಭವನದಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ಜೆಡಿಎಸ್ ಘಟಕದಿಂದ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ, ಪ್ರಾದೇಶಿಕತೆಯೇ ಜೀವಾಳ ಎನಿಸಿರುವ ಜೆಡಿಎಸ್ ಬೆಂಬಲಿಸುವುದು ರಾಜ್ಯದ ಹಿತದೃಷ್ಟಿಯಿಂದ ಸೂಕ್ತ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪದವೀಧರ ಮತದಾರರೂ ಯೋಚಿಸಿ, ತೀರ್ಮಾನ ಕೈಗೊಳ್ಳಬೇಕು ಕುಮಾರಸ್ವಾಮಿ ಕಿವಿಮಾತು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದದ ರಾಜಕಾರಣ ನಡೆಯುತ್ತಿದೆ. ಅದರ ಪರಿಣಾಮವಾಗಿಯೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡಿತು.
ಒಬ್ಬ ವ್ಯಕ್ತಿಯ ಷಡ್ಯಂತ್ರದಿಂದ ರಾಜ್ಯದಲ್ಲಿ ಅಪವಿತ್ರ ಮೈತ್ರಿಯ ವ್ಯವಸ್ಥೆ ಉಂಟಾಗಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದರು. ಸಭೆಯಲ್ಲಿ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಬಂಡೆಪ್ಪ ಕಾಂಶೆಂಪೂರ ಭಾಗವಹಿಸಿದ್ದರು.
ಇದನ್ನೂ ಓದಿ: ಮನವಿ ಕೊಡಲು ಬಂದವರು ಮುತ್ತಿಗೆ ಹಾಕಲ್ಲ: HD ಕುಮಾರಸ್ವಾಮಿ ಆಕ್ರೋಶ