ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ್, ಬಿಜೆಪಿ ಅಭ್ಯರ್ಥಿ ಎಂ.ವಿ. ರವಿಶಂಕರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೇ 16ರಂದು ಮಂಡ್ಯದ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವ ಡಾ. ಅಶ್ವತ್ಥನಾರಾಯಣ ಭೇಟಿ ಕೊಟ್ಟಿದ್ದರು. ಖಾಸಗಿ ಕಾಲೇಜು ಆಡಳಿತ ಮಂಡಳಿ ಸಭೆ ಆಯೋಜನೆ ಮಾಡಿತ್ತು. ಸಚಿವರಿಂದ ಆಡಳಿತ ದುರುಪಯೋಗವಾಗಿದೆ, ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣಾಧಿಕಾರಿಗೆ ದೂರು ನೀಡಲಾಗಿತ್ತು.
ಇದನ್ನೂ ಓದಿ | ಸಚಿವ ಅಶ್ವತ್ಥನಾರಾಯಣ್‌ರಿಂದ ನೀತಿ ಸಂಹಿತೆ ಉಲ್ಲಂಘನೆ: ಮಂಡ್ಯ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ ಜಿ.ಪಂ ಸಿಇಒ
ಉನ್ನತ ಶಿಕ್ಷಣ ಸಚಿವರಿಗೆ ಈ ಕುರಿತು ಚುನಾವಣಾಧಿಕಾರಿ ನೋಟಿಸ್ ನೀಡಿದ್ದರು. ಇದಕ್ಕೆ ಅಶ್ವತ್ಥನಾರಾಯಣ ಅವರ ಕಚೇರಿಯಿಂದ ಉತ್ತರವನ್ನೂ ನೀಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಮಂಡ್ಯ ಜಿಲ್ಲಾ ಮಟ್ಟದ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರು ಮಂಡ್ಯ ನಗರದ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜು, ಮಾಂಡವ್ಯ ಸಮೂಹ ಸಂಸ್ಥೆ ಹಾಗೂ ಪಿ.ಇ.ಎಸ್. ಕಾಲೇಜುಗಳಿಗೆ ಭೇಟಿ ನೀಡಿ ಹೇಳಿಕೆ ಪಡೆದಿದ್ದರು.
ಆದರೆ ಇಷ್ಟು ದಿನವಾದರೂ ಎಫ್‌ಐಆರ್ ದಾಖಲು ಮಾಡಿಲ್ಲ ಎಂದು ಕಾಂಗ್ರೆಸ್ ಮತ್ತೆ ಒತ್ತಾಯ ಮಾಡಿತ್ತು. ಪೊಲೀಸ್ ಠಾಣೆಯ ಜತೆಗೆ ಸಿವಿಲ್ ನ್ಯಾಯಾಲಯದಲ್ಲೂ ದೂರು ದಾಖಲಿಸಲಾಗಿತ್ತು. ಪೊಲೀಸರು ದೂರನ್ನು ಪರಿಗಣಿಸಿ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು.
ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮತ್ತು ಬಿಜೆಪಿ ಅಭ್ಯರ್ಥಿ ಎಂ. ವಿ. ರವಿಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 1860 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ| ಸಚಿವ ಅಶ್ವತ್ಥನಾರಾಯಣ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು, ನೋಟಿಸ್