Site icon Vistara News

Hanuman Flag : ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ

Hanuman Flag Keragodu protest

ಕೆರಗೋಡು (ಮಂಡ್ಯ): ಮಂಡ್ಯದ ಕೆರಗೋಡು ಗ್ರಾಮದಲ್ಲಿ ತೆರವು ಮಾಡಲಾದ ಹನುಮ ಧ್ವಜ (Hanuman Flag)ವನ್ನು ಮತ್ತೆ ಅದೇ ಜಾಗದಲ್ಲಿ ಮರುಸ್ಥಾಪನೆ ಮಾಡುವ ಶಪಥದೊಂದಿಗೆ ಹಿಂದೂ ಭಕ್ತರ ಬೃಹತ್‌ ಪಾದಯಾತ್ರೆ (Hindu devotees Padayatra) ಸೋಮವಾರ ಬೆಳಗ್ಗೆ ಕೋದಂಡರಾಮ ದೇವಾಲಯದಿಂದ ಆರಂಭವಾಗಿದೆ. 15 ಕಿ.ಮೀ. ದೂರದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯುವ ಈ ಬೃಹತ್‌ ಪ್ರತಿಭಟನೆಯಲ್ಲಿ (Protest in front of DC Office) ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಬಿಜೆಪಿ ನಾಯಕ ಸಿ.ಟಿ. ರವಿ, ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಹಾಗೂ ಕೆಆರ್‌ಆರ್‌ಪಿ ಪಕ್ಷ ನಾಯಕ ಜನಾರ್ದನ ರೆಡ್ಡಿ ಭಾಗಿಯಾಗಿದ್ದಾರೆ. ಇನ್ನೂ ಹಲವು ನಾಯಕರು ಆಗಮಿಸುತ್ತಿದ್ದಾರೆ.

ಮರಲಿಂಗನದೊಡ್ಡಿ ಗ್ರಾಮದ ಮಹಿಳೆಯರು ಆರತಿ ಬೆಳಗಿ, ಈಡುಗಾಯಿ‌ ಹೊಡೆದು ಪಾದಯಾತ್ರೆಗೆ ಶುಭ ಕೋರಿದ್ದಾರೆ. ಸಾವಿರಾರು ಗ್ರಾಮಸ್ಥರು ಹನುಮ ಧ್ವಜವನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಮುಂದುವರಿದ ಉದ್ವಿಗ್ನ ಸ್ಥಿತಿ, ಬಿಗಿ ಬಂದೋಬಸ್ತ್

‌ಕೆರಗೋಡಿನ ದೇವಸ್ಥಾನದಿಂದ ಆರಂಭಗೊಂಡ ಪಾದಯಾತ್ರೆ 15 ಕಿ.ಮೀ. ಕ್ರಮಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದೆ. ಇಲ್ಲಿ ಪ್ರತಿಭಟನಾ ಸಭೆ ಮತ್ತು ಮನವಿ ಸಲ್ಲಿಕೆ ನಡೆಯಲಿದೆ. ಪಾದಯಾತ್ರೆಯ ಮುಂದಿನ ಹಂತಗಳಲ್ಲಿ ಬಿಜೆಪಿ ಮುಖಂಡರಾದ ಆರ್.ಅಶೋಕ್, ಅಶ್ವಥ್ ನಾರಾಯಣ್ ಮುಂತಾದವರ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ.

ಹಿಂದೂಪರ ಸಂಘಟನೆ ಕಾರ್ಯಕರ್ತರು ಪಾದಯಾತ್ರೆ ನಡೆಸುವ ಹಿನ್ನೆಲೆಯಲ್ಲಿ ಮಂಡ್ಯ ಎಸ್ಪಿ ಯತೀಶ್ ಎನ್. ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪಾದಯಾತ್ರೆಗೆ ಬ್ರೇಕ್ ಹಾಕಲು ಮಂಡ್ಯ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದು, ಅಕ್ಕಪಕ್ಕದ ತಾಲೂಕುಗಳಿಂದ ಹೆಚ್ಚುವರಿ ಪೊಲೀಸ್ ತರಿಸಿ ನಿಯೋಜಿಸಲಾಗಿದೆ. ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಡಿಆರ್, ವಾಟರ್ ಜೆಟ್ ನಿಯೋಜನೆ ಮಾಡಲಾಗಿದ್ದು, ಪಾದಯಾತ್ರೆ ನಡೆಸುವವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಇದನ್ನೂ ಓದಿ : Hanuman Flag: ಹನುಮ ಧ್ವಜ ಕಿಚ್ಚು; ಕೆರಗೋಡು ಗ್ರಾಮದಲ್ಲಿ 144 ಸೆಕ್ಷನ್‌ ಜಾರಿ

ಆದರೂ ಗ್ರಾಮಸ್ಥರು ಮತ್ತು ಹಿಂದು ಕಾರ್ಯಕರ್ತರು ಹನುಮ ಧ್ವಜ ಹಾರಿಸಿದ್ದರು. ಇದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಈ ವಿಚಾರ ಮತ್ತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲಿ 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದವನ್ನು ಇತ್ಯರ್ಥ ಪಡಿಸಿದ್ದರು. ಆದರೆ, ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಇದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಮೌಖಿಕ ಆದೇಶವನ್ನು ಹೊರಡಿಸಿತ್ತು. ಹೀಗಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ತೆರವುಗೊಳಿಸಲು ಮುಂದಾದರು. ಇದಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿ ಪ್ರತಿಭಟಿಸಿದ್ದರು. ಹೀಗಾಗಿ ಅಲ್ಲಿಂದ ನಿರ್ಗಮಿಸಿದ್ದ ಅಧಿಕಾರಿಗಳು ಶನಿವಾರ (ಜ.27) ರಾತ್ರಿ ಪುನಃ ಬಂದು ಹನುಮ ತೆರವಿಗೆ ಮುಂದಾದರು. ಮುಂಜಾನೆ 3 ಗಂಟೆ ಹೊತ್ತಿಗೆ ಮಂಡ್ಯ ಎಸಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರಿಗೆ ವಿಷಯ ತಿಳಿದು ಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಸಹ ಸ್ಥಳದಲ್ಲಿದ್ದರು. ಪ್ರತಿಭಟನೆಯನ್ನೂ ಮಾಡಲಾಯಿತು. ಇದೀಗ‌ ಧ್ವಜ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ ನಡೆದಿದೆ.

Exit mobile version