ಮಂಡ್ಯ: ಗುರುವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಡ್ಯ ಜಿಲ್ಲೆ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಮಂಡ್ಯದ ಬೀಡಿ ಕಾಲೋನಿ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಜನರು ಕಂಗಾಲಾಗಿದ್ದಾರೆ.
ರಾತ್ರಿಯಿಂದ ಇಡೀ ಕಾಲೋನಿ ನಡುಗಡ್ಡೆಯಂತಾಗಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ಬಡಾವಣೆ ವಾಸಿಗಳು ಊಟ, ನಿದ್ದೆ ಇಲ್ಲದೇ ಪರಿತಪಿಸುತ್ತಿದ್ದಾರೆ. ಇಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲದ ಕಾರಣ ಈ ಅವಘಡ ಸಂಭವಿಸಿದೆ. ಇಷ್ಟೇಲ್ಲಾ ಆದರೂ ಈವರೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಮುಖ ಮಾಡಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಉಪವಾಸದಿಂದ ಬಳಲುತ್ತಿರುವ ಜನರಿಗೆ ಒಂದು ಹೊತ್ತಿನ ಊಟ ನೀಡಲು ಸಹ ಜಿಲ್ಲಾಡಳಿತ ಮುಂದಾಗಿಲ್ಲ ಎಂದು ಸ್ಥಳೀಯರು ದುಃಖಿಸಿದ್ದಾರೆ. ಈ ಬಗ್ಗೆ ನಿವಾಸಿಗಳಲ್ಲಿ ಆಕ್ರೋಶ ಮಡುಗಟ್ಟಿದೆ.
ಮಳೆಯ ಆರ್ಭಟಕ್ಕೆ ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ಬಲ್ಲೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿದಿದ್ದು, ಶಾಲೆಯ ಪಕ್ಕದಲ್ಲಿ ನಿಲ್ಲಿಸಿದ್ದ ಆಟೋ ಜಖಂಗೊಂಡಿದೆ
ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ MP: ಸಚಿವ ನಾರಾಯಣಗೌಡ ಹೇಳಿಕೆ