ಬೆಂಗಳೂರು: ಟಿಪ್ಪು ಸುಲ್ತಾನನನ್ನು(Tipu Sultan) ಕೊಂದರು ಎಂದು ಬಿಜೆಪಿ ಹೇಳುತ್ತಿರುವ ಉರಿಗೌಡ ಹಾಗೂ ನಂಜೇಗೌಡ ವಿವಾದಕ್ಕೆ ರಾಜ್ಯ ಒಕ್ಕಲಿಗರ ಸಂಘ ಪ್ರವೇಶ ನೀಡಿದೆ. ಸಂಘದ ಅಧ್ಯಕ್ಷ ಹಾಗೂ ಚನ್ನರಾಯಪಟ್ಟಣ ಜೆಡಿಎಸ್ ಶಾಸಕ ಸಿ.ಎನ್. ಬಾಲಕೃಷ್ಣ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇತ್ತೀಚೆಗೆ ಕೆಲವರು ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀ ಸಿ.ಎನ್.ಬಾಲಕೃಷ್ಣ ಖಂಡಿಸಿದ್ದಾರೆ. ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನೆಂದು ಅವರು ಪ್ರಶ್ನಿಸಿದ್ದಾರೆ.
ಈ ರೀತಿಯ ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಬಹುಶಃ ಹತ್ತಿರದಲ್ಲಿರುವ ಚುನಾವಣೆಯಲ್ಲಿ ಲಾಭ ಗಳಿಸುವ ಉದ್ದೇಶದಿಂದ ಹೀಗೆ ಮಾಡುತ್ತಿರುವ ಸಾಧ್ಯತೆಯಿದ್ದು, ಯಾವುದೇ ಕಾರಣಕ್ಕೂ ಸ್ವಾಭಿಮಾನಿ ಒಕ್ಕಲಿಗ ಸಮುದಾಯ ಸುಳ್ಳುಗಳಿಗೆ ಮಾರುಹೋಗುವುದಿಲ್ಲ ಎಂಬ ವಿಶ್ವಾಸವಿದೆ.
ಈ ಸುಳ್ಳು, ಪ್ರಚಾರದ ಮೂಲಕ ಒಕ್ಕಲಿಗರನ್ನು ಅವಮಾನಿಸುವ ಕುತಂತ್ರದ ಹಿಂದೆ ಯಾರಿದ್ದಾರೆ, ಅವರನ್ನು ಪತ್ತೆ ಹಚ್ಚಿ, ಸರ್ಕಾರ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರವು ಈ ರೀತಿ ಸುಳ್ಳು ಸುದ್ದಿ ಹಬ್ಬುವಿಕೆಯನ್ನು ತಡೆಯದಿದ್ದರೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಮತ್ತು ಸ್ಪಟಿಕಪುರಿ ಸ್ವಾಮೀಜಿ ಶ್ರೀ ನಂಜಾವಧೂತ ಸ್ವಾಮೀಜಿಯವರ ನೇತೃತ್ವದಲ್ಲಿ ರಾಜ್ಯ ಒಕ್ಕಲಿಗರ ಸಂಘವು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನಗರದಲ್ಲಿನ ಬಡ ಒಕ್ಕಲಿಗರಿಗೆ EWS ಪುಮಾಣ ಪತ್ರ ಕೊಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿರುವ ಸಿ.ಎನ್. ಬಾಲಕೃಷ್ಣ, ಒಕ್ಕಲಿಗರಿಗೆ ಅವರ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಜಾರಿ ಮಾಡಲು ಯಾವುದೇ ಕ್ರಮ ಕೈಗೊಂಡಿರದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
2ಸಿ ಎಂಬ ಹೊಸ ಪ್ರವರ್ಗದ ಅಡಿಯಲ್ಲಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಎಂದು ರಾಜ್ಯ ಸರ್ಕಾರ ಹೇಳಿದ್ದು ಕಣ್ಮರೆಸುವ ತಂತ್ರವಾಗಿದ್ದು, ಇದರಿಂದ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ವಿಷಯದಲ್ಲಿ ಯಾವುದೇ ಪುಯೋಜನವಿಲ್ಲ. ಒಕ್ಕಲಿಗರಿಗೆ ಅವರ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹೆಚ್ಚಿಸಲು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳದಿದ್ದರೆ ಈ ವಿಷಯವಾಗಿಯೂ ರಾಜ್ಯ ಒಕ್ಕಲಿಗರ ಸಂಘ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: Tippu Sulthan: ಮೊದಲು ಬೋರೇಗೌಡನನ್ನು ನೋಡಿ; ಆಮೇಲೆ ಉರಿಗೌಡ-ನಂಜೇಗೌಡ ಎಂದ ಎಚ್.ಡಿ.ಕೆ