Site icon Vistara News

Ganesha Festival | ಪರಿಸರ ಸ್ನೇಹಿ ಆಚರಣೆಗೆ ಸಿದ್ಧತೆ, ಬಿಬಿಎಂಪಿಯಿಂದ ಹಲವು ನಿರ್ಬಂಧ

ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬವನ್ನು (Ganesha Festival) ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಹಲವು ನಿರ್ಬಂಧಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಧಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್, ಥರ್ಮಾಕೊಲ್, ರಾಸಾಯನಿಕ ಬಣ್ಣದ ಗಣೇಶ, ಪ್ಲಾಸ್ಟಿಕ್ ಫ್ಲೆಕ್ಸ್, ಬ್ಯಾನರ್ ನಿಷೇಧಿಸುವುದು ಹಾಗೂ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಏಕಗವಾಕ್ಷಿ ಕೇಂದ್ರ ತೆರೆಯುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದ ಬಿಬಿಎಂಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತರು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ, ಹಲಸೂರು, ಯಡಿಯೂರು, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಕೂಡ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಲು ಹಾಗೂ ವಸತಿ ಪ್ರದೇಶದಿಂದ ಕೆರೆಗಳು ದೂರವಿರುವರಿಗೆ ಚಿಕ್ಕ ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡಲು ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ಬಿಬಿಎಂಪಿಯು ವಾರ್ಡ್ ವಾರು ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಸ್ಥಾಪಿಸಲು ತಿಳಿಸಿದ್ದಾರೆ.‌

ಇದನ್ನೂ ಓದಿ | Krishna Janmashtami | ವಿಟ್ಲಪಿಂಡಿಯೊಂದಿಗೆ ಉಡುಪಿ ಕೃಷ್ಣಜನ್ಮಾಷ್ಟಮಿ ಸಂಭ್ರಮ ಸಂಪನ್ನ

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾದ ಬ್ಯಾರಿಕೇಡಿಂಗ್ ಹಾಗೂ ಪ್ರತಿಯೊಂದು ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯೊಂದರಲ್ಲಿ ಹತ್ತು ಮಂದಿ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿ ವರ್ಗದವರನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಆಯಾ ಸ್ಥಳಗಳಲ್ಲಿ ಸೂಕ್ತ ಧ್ವನಿವರ್ಧಕಗಳನ್ನು ಅಳವಡಿಸಿ ಜಾಗೃತಿ ಸಂದೇಶದ ಮೂಲಕ ಅರಿವು ಮೂಡಿಸಿ, ಅಗತ್ಯವಾದ ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸೂಚಿಸಿದರು.

ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು (ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಆಗಿಂದಾಗ್ಗೆ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ತಿಳಿಸಿದರು. ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ಧಪಡಿಸಿರಬೇಕು. ಜತೆಗೆ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ, ವಿಸರ್ಜನಾ ಮೆರವಣಿಗೆಯನ್ನು ಕೊಂಡೊಯ್ಯುವ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಕಡ್ಡಾಯವಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿ ಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಬಣ್ಣದ/ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಸಾರ್ವಜನಿಕರಲ್ಲಿ ಮುಖ್ಯ ಆಯುಕ್ತರು ಮನವಿ ಮಾಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ವಲಯದ ಜಂಟಿ ಆಯುಕ್ತರು, ಆರೋಗ್ಯ ವೈದ್ಯಾಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತ (ಘನ ತ್ಯಾಜ್ಯ ನಿರ್ವಹಣೆ) ವಾರ್ಡ್‌ವಾರು ಪಟ್ಟಿ ಮಾಡಿ, ಸ್ಥಳ ತನಿಖೆ ಕೈಗೊಂಡು ರಾಸಾಯನಿಕ ಬಣ್ಣಗಳು, ಥರ್ಮೊಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿಕೊಂಡು ಗಣೇಶ ಮೂರ್ತಿ ತಯಾರಿಕೆಯನ್ನು ನಡೆಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿರುವವರಿಗೆ ದಂಡ ವಿಧಿಸಿ ಜತೆಗೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಸಾರ್ವಜನಿಕರು ಸಹ ಸಹಕರಿಸಲು ಕೋರಿದೆ.

ಇದನ್ನೂ ಓದಿ | BBMP Election | ಆಗಸ್ಟ್ 25ರಂದು ಮತದಾರರ ಪಟ್ಟಿ ಕರಡು ಪ್ರತಿ ಪ್ರಕಟ

Exit mobile version