ಬೆಂಗಳೂರು: ನನೆಗುದಿಗೆ ಬಿದ್ದಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಗಿದ್ದಾರೆ. ಪದವಿ ಪೂರ್ವ ಶಿಕ್ಷಣದವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಿಸುವ ಶುಚಿ ಯೋಜನೆಯಲ್ಲಿ (Shuchi Scheme) ಈ ಬಾರಿ ಹೊಸ ಪ್ರಯೋಗಕ್ಕೂ ಸಚಿವರು ಕ್ರಮ ಕೈಗೊಂಡಿದ್ದು, ಕಡಿಮೆ ಖರ್ಚಿನಲ್ಲಿ ಪರಿಸರ ಸ್ನೇಹಿ ಯೋಜನೆ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿದ್ದಾರೆ.
ಸ್ಯಾನಿಟರಿ ನ್ಯಾಪ್ಕಿನ್ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ಹತ್ತಾರು ವರ್ಷ ಬಾಳಿಕೆ ಬರುವ ಮೆನ್‌ಸ್ಟ್ರುಯಲ್ ಕಪ್‌ಗಳನ್ನು ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ. ಪ್ರಾಯೋಗಿಕವಾಗಿ ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಎರಡು ಜಿಲ್ಲೆಗಳಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ.
ನನ್ನ ಮೈತ್ರಿ ಹೆಸರಿನಲ್ಲಿ ಹೆಣ್ಣು ಮಕ್ಕಳ ಋತುಸ್ರಾವ ನಿರ್ವಹಣೆಗೆ ಮೆನ್‌ಸ್ಟ್ರುಯಲ್ ಕಪ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಸೆ.11 ರಂದು ಸೋಮವಾರ ಮಂಗಳೂರಿನ ನೆಹರು ಮೈದಾನದಲ್ಲಿ ಯೋಜನೆಗೆ ಚಾಲನೆ ದೊರೆಯಲಿದೆ. ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ 15 ಸಾವಿರ ಪದವಿ ಪೂರ್ವ ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ವಿತರಿಸಲು ಯೋಜಿಸಲಾಗಿದೆ.
ಹೆಣ್ಣು ಮಕ್ಕಳಲ್ಲಿ ಮುಟ್ಟಿನ ನಿರ್ವಹಣೆಗೆ ಸೂಕ್ತ ಸಾಧನವಾಗಿರುವ ಹಾಗೂ ಮರುಬಳಕೆ ಮಾಡಬಹುದಾದ ಮುಟ್ಟಿನ ಕಪ್‌ಗಳ ಬಗ್ಗೆ ಮಾಹಿತಿ ನೀಡಿ, ಕಪ್‌ಗಳ ಬಳಕೆಯನ್ನು ಪ್ರೋತ್ಸಾಹಿಸಲು ಉದ್ದೇಶಿಸಲಾಗಿದೆ. ಪ್ರಥಮ ಹಂತದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು 300 ಫಲಾನುಭವಿಗಳಿಗೆ ಮೆನ್‌ಸ್ಟ್ರುಯಲ್ ಕಪ್‌ಗಳನ್ನು ವಿತರಿಸಿ ಅಧ್ಯಯನ ನಡೆಸಲಾಗಿತ್ತು. ಸುಮಾರು 272 ಹೆಣ್ಣು ಮಕ್ಕಳು ಮುಟ್ಟಿನ ಕಪ್‌ಗಳನ್ನು ಸ್ವೀಕರಿಸಿ ಯಶಸ್ವಿಯಾಗಿ ಬಳಕೆ ಮಾಡುತ್ತಿದ್ದಾರೆ.
ನ್ಯಾಪ್ಕಿನ್‌ಗಳಿಗೆ ಪರ್ಯಾಯವಾಗಿ ಮೆನ್‌ಸ್ಟ್ರುಯಲ್ ಕಪ್‌ಗಳಿಗೆ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಗಳ ಮಟ್ಟಕ್ಕೆ ಪ್ರಯೋಗ ನಡೆಸಿ, ರಾಜ್ಯಾದ್ಯಂತ ಯೋಜನೆ ವಿಸ್ತರಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಂತನೆ ನಡೆಸಿದ್ದಾರೆ. ಮೆನ್‌ಸ್ಟ್ರುಯಲ್ ಕಪ್‌ಗಳನ್ನು 8 ಗಂಟೆಯ ಸಮಯದವರೆಗೆ ಬಳಸಬಹುದು. ಅಲ್ಲದೇ ಸೂಕ್ತ ನಿರ್ವಹಣೆಯೊಂದಿಗೆ ಕನಿಷ್ಠ 8-10 ವರ್ಷಗಳವರೆಗೆ ಸಮರ್ಥನೀಯವಾಗಿ ಮರುಬಳಕೆ ಮಾಡಬಹುದು.
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಆರಂಭಿಸಲಾಗಿದ್ದ ಶುಚಿ ಯೋಜನೆ ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿತ್ತು. ಇದೀಗ ದಿನೇಶ್ ಗುಂಡೂರಾವ್ ಆರೋಗ್ಯ ಸಚಿವರಾದ ಬಳಿಕ ಶುಚಿ ಯೋಜನೆಯನ್ನ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲಾ, ಪದವಿ ಪೂರ್ವ ಕಾಲೇಜು, ಹಾಸ್ಟೆಲ್‌ಗಳ ವಿದ್ಯಾರ್ಥಿನಿಯರ ಆರೋಗ್ಯದ ಹಿತದೃಷ್ಟಿಯಿಂದ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ಇನ್ನು ಪ್ರಸಕ್ತ ಸಾಲಿನಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದ್ದು, ರಾಜ್ಯದ ಸರಿಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಿಸಲು ಸಿದ್ಧತೆಗಳು ಆರಂಭಿಸಲಾಗಿದೆ. 40.50 ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಅಕ್ಟೋಬರ್ ತಿಂಗಳ ಆರಂಭದಲ್ಲೇ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಣೆಗೆ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳೂರಿನಲ್ಲಿ ಸೆ.11ಕ್ಕೆ ಚಾಲನೆ
ಶುಚಿ ಯೋಜನೆಯ ಅಡಿಯಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಂಡಿರುವ ನನ್ನ ಮೈತ್ರಿ ಮುಟ್ಟಿನ ಕಪ್ ವಿತರಣೆಗೆ ಮಂಗಳೂರಿನ ನೆಹರು ಮೈದಾನದಲ್ಲಿ ಸೋಮವಾರ ಬೆಳಗ್ಗೆ 9.30ಕ್ಕೆ ಚಾಲನೆ ದೊರೆಯಲಿದೆ. ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಫಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಹಾಗೂ ನಟಿ ಸಪ್ತಮಿ ಗೌಡ ಅವರು ವೇದಿಕೆ ಅಲಂಕರಿಸಲಿದ್ದಾರೆ.