ರಾಮನಗರ: ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ರೂಪಿಸಿವೆ. ಇದರ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಷಾ ಇದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್ ಪಕ್ಷವು ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಏನೇನೂ ಇಲ್ಲ. ಸ್ವತಃ ಮುಡಾ ತನ್ನ ತಪ್ಪನ್ನು ಒಪ್ಪಿಕೊಂಡು, ಮುಖ್ಯಮಂತ್ರಿಗಳ ಪತ್ನಿಗೆ ಬದಲಿ ನಿವೇಶನಗಳನ್ನು ಕೊಟ್ಟಿದೆ. ಇದೆಲ್ಲ ನಡೆದಿರುವುದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗ ಮುಡಾದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರಾದ ಸಾ.ರಾ. ಮಹೇಶ್, ಜಿ.ಟಿ. ದೇವೇಗೌಡ ಮತ್ತು ರಾಮದಾಸ್ ಅವರೇ ಇದ್ದರು ಎಂದು ಅವರು ಆರೋಪಿಸಿದರು.
ಇದನ್ನೂ ಓದಿ: KCET 2024 : ನೀಟ್ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು
ಈಗ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ಖಾಸಗಿ ದೂರಿನ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಮೂಲಕ ಅವರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಆದರೆ ನಾವು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅವ್ಯವಹಾರಗಳನ್ನು ಬಯಲಿಗೆ ಎಳೆಯಲಿದ್ದೇವೆ ಎಂದು ಸಚಿವರು ತಿಳಿಸಿದರು.
ಯಡಿಯೂರಪ್ಪನವರು ಮಾರಿಷಸ್‌ನಲ್ಲಿ ಹತ್ತು ಸಾವಿರ ಕೋಟಿ ರೂಪಾಯಿ ಇಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರೇ ಆರೋಪಿಸಿದ್ದಾರೆ. ಮೋದಿ ಸರ್ಕಾರವು ನಮಗೆ ಬರ ಪರಿಹಾರ, ಬಜೆಟ್ ಹಂಚಿಕೆ, ತೆರಿಗೆ ವಿತರಣೆ ಎಲ್ಲದರಲ್ಲೂ ಅನ್ಯಾಯ ಮಾಡುತ್ತಿದೆ. ಈಗ ಚುನಾಯಿತ ಸರ್ಕಾರವನ್ನು ಉರುಳಿಸುವ ದುಸ್ಸಾಹಸಕ್ಕೆ ಬಿಜೆಪಿ ಮತ್ತು ಜೆಡಿಎಸ್ ಇಳಿದಿವೆ ಎಂದು ಆರೋಪಿಸಿದರು.
ಎಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವ ಸಿದ್ಧಾಂತವೂ ಇಲ್ಲ. ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದೇ ಅವರ ಸೂತ್ರ. ಹಿಂದೆ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಆದರು. ಈಗ ಬಿಜೆಪಿಯನ್ನು ಹಿಡಿದುಕೊಂಡು ಹೋಗಿದ್ದಾರೆ. ಹಿಂದುಳಿದವರು ಮತ್ತು ದಮನಿತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಈಗ ಅವರು ಕಾಲು ಕೆರೆಯುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದರು.
ಇದನ್ನೂ ಓದಿ: Ginger Benefits: ಮಳೆಗಾಲದ ಸೋಂಕುಗಳಿಗೆ ಬೇಕು ಶುಂಠಿಯೆಂಬ ಮದ್ದು!
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ ಡಾ.ಎಂ.ಸಿ.ಸುಧಾಕರ, ಜಮೀರ್ ಅಹಮದ್, ಕೆ.ಎಚ್. ಮುನಿಯಪ್ಪ, ಡಾ. ಶರಣು ಪ್ರಕಾಶ ಪಾಟೀಲ್, ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.