ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದ್ದು, ಅದರಂತೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ರಾಜ್ಯೋತ್ಸವಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.
ರಾಜ್ಯೋತ್ಸವ ಸಿದ್ಧತೆಗೆ ಸೂಚನೆಗಳು
- ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು.
- ನವೆಂಬರ್ 1 ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ)
ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ
ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ
ಗೌರವ ಸಲ್ಲಿಸಲು ಮನವಿ ಮಾಡುವುದು. - ನವೆಂಬರ್ 1 ರ ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಅಚರಿಸಲು ಮನವಿ ಮಾಡುವುದು.
- ನವೆಂಬರ್ 1 ರ ಸಂಜೆ 7 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು,
ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ ಎಲ್ಲಾ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.
ಇದನ್ನೂ ಓದಿ | Kannada Rajyotsava: ಕನ್ನಡ ನಾಡು ʻಕರ್ನಾಟಕʼ ಆಗಿದ್ದು ಹೇಗೆ?