ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಬಾತ್‌ರೂಮ್‌ನಲ್ಲಿಯೇ ಅವರು ಕುಸಿದು ಬಿದ್ದಿದ್ದು, ಕೂಡಲೇ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ತುರ್ತು ನಿಗಾ ಘಟಕ (ICU)ದಲ್ಲಿ ಇರಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, ಅರಣ್ಯ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ನಿಭಾಯಿಸುತ್ತಿದ್ದರು.
ಬೆಂಗಳೂರಿನತ್ತ ಕುಟುಂಬಸ್ಥರು
ಉಮೇಶ್ ಕತ್ತಿ ಅವರ ನಿಧನದ ಸುದ್ದಿ ತಿಳಿಯುತ್ತಲೇ ಸಚಿವರ ಕುಟುಂಬಸ್ಥರು ತೀವ್ರ ಆತಂಕಕ್ಕೀಡಾಗಿದ್ದು, ಪತ್ನಿ ಹಾಗೂ ಪುತ್ರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಟುಂಬಸ್ಥರ ಜತೆ ಮಾತನಾಡಿ ಧೈರ್ಯ ತುಂಬಿದ್ದಾರೆ.
ಆಸ್ಪತ್ರೆಯತ್ತ ಗಣ್ಯರ ದೌಡು
ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಗಣ್ಯರು ದೌಡಾಯಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ, ಲಕ್ಷ್ಮಣ ಸವದಿ, ಮುನಿರತ್ನ ಸೇರಿ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.